ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಹೈಕೋರ್ಟ್ ಬುಧವಾರ ಬಿಗ್ ರಿಲೀಫ್ ನೀಡಿದೆ.
ವಿಶೇಷ ಕೋರ್ಟ್ ವಿಧಿಸಿದ್ದ ಜೈಲು ಶಿಕ್ಷೆ ಪ್ರಶ್ನಿಸಿ ಸತೀಶ್ ಸೈಲ್ ಹಾಗೂ ಇತರ ಆರೋಪಿಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಆದೇಶಿಸಿದೆ.
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಆರೋಪಿಗಳಿಗೆ ಒಟ್ಟು ಆರು ಪ್ರಕರಣಗಳಲ್ಲಿ ಶಿಕ್ಷೆ ಹಾಗೂ ದಂಡ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಆರೋಪಿಗಳ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಜನ ಪ್ರತಿನಿಧಿಗಳ ಕೋರ್ಟ್ ನೀಡಿದ್ದ ಶಿಕ್ಷೆಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ಆರು ವಾರದಲ್ಲಿ ದಂಡದ ಮೊತ್ತದ ಶೇ. 25ರಷ್ಟನ್ನು ವಿಚಾರಣಾಧೀನ ನ್ಯಾಯಾಲಯದಲ್ಲಿ ಠೇವಣಿ ಇಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಅಲ್ಲದೆ, ದಂಡದ ಮೊತ್ತವನ್ನು ವಿಚಾರಣಾಧೀನ ನ್ಯಾಯಾಲಯದಲ್ಲಿ ಠೇವಣಿ ಇಡುವ ಷರತ್ತಿಗೆ ಒಳಪಟ್ಟು ವಿಶೇಷ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿದೆ.
ಹೈಕೋರ್ಟ್ ಶಿಕ್ಷೆ ಅಮಾನತುಗೊಳಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ ಇತರೆ ಅಪರಾಧಿಗಳು ನಾಳೆ(ನವೆಂಬರ್ 14) ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
Advertisement