ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಉಪ ಚುನಾವಣೆ ನಡೆದಿದ್ದು, ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದೆ. ಇದರೊಂದಿಗೆ ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿದೆ.
ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದ್ದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯಗೊಂಡಿದ್ದು, ಮೂರು ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 76.9 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಹೈವೋಲ್ಟೇಜ್ ಕ್ಷೇತ್ರ ಚನ್ನಪಟ್ಟಣದಲ್ಲಿ ದಾಖಲೆಯ ಮತದಾನ
ಜಿದ್ದಾ ಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಬೊಂಬೆ ನಾಡು ಚನ್ನಪಟ್ಟಣದಲ್ಲಿ ದಾಖಲೆಯ ಶೇ. 88.80 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಚನ್ನಪಟ್ಟಣದಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್‌ನಿಂದ ಸಿ. ಪಿ. ಯೋಗೇಶ್ವರ್ ಸೇರಿದಂತೆ 31 ಮಂದಿ ಕಣದಲ್ಲಿದ್ದಾರೆ.
ಇನ್ನೂ ಸಂಡೂರಿನಲ್ಲಿ ಶೇ.76.24 ರಷ್ಟು ಹಾಗೂ ಶಿಗ್ಗಾಂವಿಯಲ್ಲಿ ಶೇ.80.48ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಸಂಡೂರಲ್ಲಿ ಕಾಂಗ್ರೆಸ್‌ನ ಇ. ಅನ್ನಪೂರ್ಣ, ಬಿಜೆಪಿಯಿಂದ ಬಂಗಾರು ಹನುಮಂತ ಸೇರಿ 6 ಹುರಿಯಾಳುಗಳು ಕಣದಲ್ಲಿದ್ದಾರೆ.
ಶಿಗ್ಗಾಂವಿಯಲ್ಲಿ ಬಿಜೆಪಿಯಿಂದ ಭರತ್ ಬೊಮ್ಮಾಯಿ, ಕಾಂಗ್ರೆಸ್‌ನಿಂದ ಪಠಾಣ್ ಯಾಸೀರ್ ಅಹ್ಮದ್‌ಖಾನ್ ಸೇರಿದಂತೆ 8 ಅಭ್ಯರ್ಥಿಗಳಿದ್ದಾರೆ.
ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಹರಸಾಹಸ ಪಟ್ಟಿದ್ದಾರೆ. ಇದಕ್ಕಾಗಿ ಹಲವು ರೀತಿ ತಂತ್ರ, ಪ್ರತಿತಂತ್ರಗಳ ಮೂಲಕ ಪ್ರಚಾರ ನಡೆಸಿದ್ದರು.
Advertisement