ಧಾರವಾಡ: ದೇಶಾದ್ಯಂತ ಸುದ್ದಿಯಾಗಿದ್ದ ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದಲ್ಲಿನ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದ್ದ 97 ಮಂದಿಗೆ ಹೈಕೋರ್ಟ್ ಧಾರವಾಡ ಪೀಠ ಬುಧವಾರ ಜಾಮೀನು ನೀಡಿದೆ.
ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ ಎ-1 ಆರೋಪಿಯನ್ನು ಹೊರತುಪಡಿಸಿ ಉಳಿದ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿತು. ಎ-1 ಆರೋಪಿ ಜಾಮೀನು ಕೋರಿ ಅರ್ಜಿ ಸಲ್ಲಿಸಿಲ್ಲ. ಮತ್ತೊಬ್ಬ ಆರೋಪಿ ಆದೇಶ ಪ್ರಕಟವಾದ ನಂತರ ಮೃತಪಟ್ಟಿದ್ದರು.
ಜಾಮೀನಿಗೆ ಒಬ್ಬರ ಭದ್ರತೆ ಮತ್ತು 50 ಸಾವಿರ ರೂ . ಬಾಂಡ್ ನೀಡಬೇಕು ಎಂದು ಷರತ್ತು ವಿಧಿಸಲಾಗಿದೆ.
2014ರ ಆಗಸ್ಟ್ 28 ರಂದು ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ಮಂಜುನಾಥ ಮತ್ತು ಸ್ನೇಹಿತರು ಎಂಬುವರು ಪವರ್ ಸಿನಿಮಾ ನೋಡಲು ಗಂಗಾವತಿ ನಗರದಲ್ಲಿರುವ ಶಿವ ಚಿತ್ರಮಂದಿರಕ್ಕೆ ಹೋಗಿದ್ದರು. ಈ ಸಮಯದಲ್ಲಿ ಟಿಕೆಟ್ ತೆಗೆದುಕೊಳ್ಳುವ ವಿಚಾರಕ್ಕೆ ಜಗಳ ಆರಂಭವಾಗಿತ್ತು. ಬಳಿಕ, ಮಂಜುನಾಥ್ ಮತ್ತು ಆತನ ಸ್ನೇಹಿತರು, “ನಮ್ಮೂರಿನ ದಲಿತರು ನಮ್ಮ ಮೇಲೆ ಹಲ್ಲೆ ಮಾಡಿಸಿದ್ದಾರೆ” ಎಂದು ಗ್ರಾಮದಲ್ಲಿ ಹೇಳಿದ್ದರು. ಇದು ಸವರ್ಣೀಯ ಕುಟುಂಬಗಳ ಆಕ್ರೋಶಕ್ಕೆ ಕಾರಣವಾಗಿತ್ತು.
ಹೀಗಾಗಿ ಅಂದು ಸಂಜೆ ಗ್ರಾಮದ ಸವರ್ಣೀಯರು, ದಲಿತರ ಕೇರಿ ಮೇಲೆ ದಾಳಿ ಮಾಡಿದ್ದರು. ದಲಿತರಿಗೆ ಸೇರಿದ್ದ ನಾಲ್ಕು ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. ಅನೇಕರ ಮೇಲೆ ಸಿಕ್ಕಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿದ್ದರು. ಕೇವಲ ಬೆಂಕಿ ಹಚ್ಚಿದ್ದು ಮಾತ್ರವಲ್ಲ, ಅಂದು 27 ದಲಿತರ ಮೇಲೆ ಹಲ್ಲೆಯಾಗಿತ್ತು. ಈ ಬಗ್ಗೆ ಅಂದು ಘಟನೆಯಲ್ಲಿ ಗಾಯಗೊಂಡವರು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸವರ್ಣೀಯರ ವಿರುದ್ದ ಅಟ್ರಾಸಿಟಿ, ಕೊಲೆಗೆ ಯತ್ನ, ದೊಂಬಿ, ಜೀವ ಬೆದರಿಕೆ ಸೇರಿದಂತೆ ಅನೇಕ ಸೆಕ್ಷನ್ ಅಡಿಯಲ್ಲಿ ಪ್ರಕರಣಗಳು ದಾಖಲಿಸಿದ್ದರು. ಘಟನೆ ಬಳಿಕ 117 ಸವರ್ಣೀಯರ ಮೇಲೆ ಕೇಸ್ ದಾಖಲಾಗಿತ್ತು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ಸೇರಿದ ಮೂವರು ಆರೋಪಿಗಳಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
Advertisement