ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧವೇ FIR ದಾಖಲಾಗಿದ್ದು, ಸುಳ್ಳು ಮಾಹಿತಿ ನೀಡಿದ ಆರೋಪದ ಮೇರೆಗೆ ಪ್ರಕರಣ ದಾಖಲಾಗಿದೆ.
ಜನರಲ್ಲಿ ಭಯ ಮೂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಮಾಹಿತಿ ಹಬ್ಬಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರ ಫೇಸ್‌ಬುಕ್ ಪೋಸ್ಟ್‌ನಲ್ಲಿ ಮಾನಹಾನಿ ಮಾಡುವ ಉದ್ದೇಶದಿಂದ ಸ್ನೇಹಮಯಿ ಕೃಷ್ಣ ಅವರು ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕರ್ನಾಟಕ ಘಟಕದ ವಕ್ತಾರ ಲಕ್ಷ್ಮಣ್ ಎಂ ನೀಡಿದ ದೂರಿನ ಮೇರೆಗೆ ಮಂಗಳವಾರ ರಾತ್ರಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಆರೋಪಿ ನಂಬರ್ 1 ಎಂದು ಹೆಸರಿಸಲಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ತನ್ನ ಪತ್ನಿ ಪಾರ್ವತಿ ಬಿಎಂ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಿರುವ ಆರೋಪ ಎದುರಿಸುತ್ತಿದ್ದಾರೆ.
ಮೈಸೂರಿನ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್ 27ರಂದು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಸಿದ್ದರಾಮಯ್ಯ, ಅವರ ಪತ್ನಿ, ಸಂಬಂಧಿ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಅಂತೆಯೇ ತಹಸೀಲ್ದಾರ್ ಅವರು ಪಾರ್ವತಿ ಪರವಾಗಿ ಮಾರಾಟ ಪತ್ರವನ್ನು ನೋಂದಾಯಿಸುವಾಗ ನೋಂದಣಿ ಶುಲ್ಕವನ್ನು ಪಾವತಿಸಿದ್ದಾರೆ ಎಂದು ಕೃಷ್ಣ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.
ದೇವರಾಜ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 353(1)(ಬಿ) ಅಡಿಯಲ್ಲಿ ರಾಜ್ಯದ ವಿರುದ್ಧ ಅಪರಾಧ ಎಸಗುವಂತೆ ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಸುಳ್ಳು ಮಾಹಿತಿ, ವದಂತಿ ಹಬ್ಬಿಸಿದ ಆರೋಪದಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲು ನಿರ್ದೇಶನ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ಮೇರೆಗೆ ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಸಿದ್ದರಾಮಯ್ಯ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿತ್ತು.
ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ಯೂನಿಯನ್ ಆಫ್ ಇಂಡಿಯಾ, ರಾಜ್ಯ ಸರ್ಕಾರ, ಸಿಬಿಐ, ಲೋಕಾಯುಕ್ತ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ, ಪ್ರಕರಣದಲ್ಲಿ ಇದುವರೆಗೆ ನಡೆದಿರುವ ದಾಖಲೆಯ ತನಿಖೆಯನ್ನು ಲೋಕಾಯುಕ್ತಕ್ಕೆ ವಹಿಸುವಂತೆ ಸೂಚಿಸಿ, ಮುಂದಿನ ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಿದರು.
Advertisement