ಬೆಂಗಳೂರು: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಒಕ್ಕಲಿಗರ ಸಂಘ ಒತ್ತಾಯಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘ ಹಾಗೂ ಸಭಾದ ಪದಾಧಿಕಾರಿಗಳು. ಕುಮಾರಸ್ವಾಮಿ ಅವರ ಬಣ್ಣದ ಬಗ್ಗೆ ಜಮೀರ್ ಅವರು ಆಡಿರುವ ಮಾತು ಅದು ಇಡೀ ಒಕ್ಕಲಿಗ ಜನಾಂಗಕ್ಕೆ, ರಾಜ್ಯದ ಜನರಿಗೆ ಮಾಡಿರುವ ಅವಹೇಳನ. ಇಂತಹ ಮಾತುಗಳು ಶೋಭೆ ತರುವುದಿಲ್ಲ. ಸಭ್ಯತೆಯ ಎಲ್ಲೆ ಮೀರಿ ಮಾತನಾಡುವ ವ್ಯಕ್ತಿ ಸಚಿವ ಸ್ಥಾನದಲ್ಲಿ ಮುಂದುವರಿಯಬಾರದು ಎಂದು ಆಗ್ರಹಿಸಿದ್ದಾರೆ.
ಜಮೀರ್ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದ ಬಗ್ಗೆಯೂ ಲಘುವಾಗಿ ಮಾತನಾಡಿದ್ದಾರೆ. ರಾಜಕೀಯವಾಗಿ ಯಾರಿಗೂ ನೋವಾಗದಂತೆ ಟೀಕೆ-ಟಿಪ್ಪಣಿ ಮಾಡಲು ಅಭ್ಯಂತರವಿಲ್ಲ. ಆದರೆ, ವ್ಯಕ್ತಿಗತ, ಸಮಾಜದ ಹಿತಕ್ಕೆ ಧಕ್ಕೆಯಾಗುವಂತೆ ವರ್ಣದ ಬಗ್ಗೆ ನಿಂದನೆ ಅವರ ಘನತೆಗೆ ತಕ್ಕದಾಗಿರಲಿಲ್ಲ. ತಮ್ಮ ಹೇಳಿಕೆಯನ್ನು ಮಾಧ್ಯಮಗಳ ಮೂಲಕ ಮತ್ತೆ ಸಮರ್ಥನೆ ಮಾಡಿಕೊಂಡಿದ್ದಾರೆ. ಒಕ್ಕಲಿಗ ಸಮಾಜ ಇಂತಹ ನಡೆಯನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
ವಕ್ಫ್‌ಬೋರ್ಡ್ ಮೂಲಕ ಹಿಂದೂಗಳ ಭೂಮಿ ಕಬಳಿಸಲು ಯತ್ನಿಸುತ್ತಿರುವ ಸಚಿವ ಜಮೀರ್ ಅಹಮದ್ ಖಾನ್ ಇದೇ ರೀತಿ ಮಾತು ಮುಂದುವರಿಸಿದರೆ ಒಕ್ಕಲಿಗರು ಬೀದಿಗಿಳಿಯಬೇಕಾಗುತ್ತದೆ ಎಂದು ಇದೇ ವೇಳೆ ಎಚ್ಚರಿಕೆ ನೀಡಿದ್ದಾರೆ.
Advertisement