ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಈ ಬಾರಿ ಹೊಸಬರಿಗೆ ಅವಕಾಶ ನೀಡಲಾಗಿದೆ. ಸಚಿವ ಸತೀಶ್ ಜಾರಕಿಹೊಳಿ ಸೂಚಿಸಿದ ಕಾಂಗ್ರೆಸ್ ಬೆಂಬಲಿತ ನಿರ್ದೇಶಕ ಅಪ್ಪಾಸಾಹೇಬ್ ಕುಲಗೋಡೆ ಅವರೇ ಬೆಳಗಾವಿ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಮೊದಲಿಗೆ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಹಾಗೂ ಸತೀಶ್ ಜಾರಕಿಹೊಳಿ ತಲಾ ಒಬ್ಬೊಬ್ಬರನ್ನು ಸೂಚಿಸಿದ್ದರು. ಆದ್ರೆ, ಅಂತಿಮವಾಗಿ ಸಭೆಯಲ್ಲಿ ಚರ್ಚೆ ಮಾಡಿ ಸತೀಶ್ ಜಾರಕಿಹೊಳಿ ಸೂಚಿಸಿದ ಅಪ್ಪಾಸಾಹೇಬ್ ಕುಲಗೋಡೆ ಅವರನ್ನೇ ಅವಿರೋಧವಾಗಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇನ್ನು ಬಾಲಚಂದ್ರ ಜಾರಕಿಹೊಳಿ ಸೂಚಿಸಿದ ಸುಭಾಷ್ ಢವಳೇಶ್ವರ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ನೂತನ ಅಧ್ಯಕ್ಷರ ಆಯ್ಕೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ್ ಜಾರಕಿಹೊಳಿ ಅಣ್ಣಾಸಾಹೇಬ ಜೊಲ್ಲೆ, ಮಹಾಂತೇಶ ದೊಡ್ಡಗೌಡರ, ಸುಭಾಷ ಢವಳೇಶ್ವರ, ಅರವಿಂದ ಪಾಟೀಲ ಅವರ ಹೆಸರು ಅಧ್ಯಕ್ಷ ಸ್ಥಾನಕ್ಕೆ ಕೇಳಿ ಬಂದಿದ್ದವು. ಆದರೆ ಅಂತಿಮವಾಗಿ ಜಿಲ್ಲಾ ನಾಯಕರು, ನಿರ್ದೇಶಕರು, ಶಾಸಕರು, ಮಾಜಿ ಶಾಸಕರ ಜೊತೆ ಚರ್ಚಿಸಿ ಒಮ್ಮತದ ನಿರ್ಧಾರಕ್ಕೆ ಬಂದಿದ್ದೇವೆ. ರಾಯ ಬಾಗ ಕ್ಷೇತ್ರದ ನಿರ್ದೇಶಕ ಅಪ್ಪಾಸಾಹೇಬ ಕುಲಗೋಡೆ ಅವರನ್ನು ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದೇವೆ. ಅದೇ ರೀತಿ ಉಪಾಧ್ಯಕ್ಷರಾಗಿ ಸುಭಾಷ ಢವಳೇಶ್ವರ ಮುಂದುವರಿಯಲಿದ್ದಾರೆ ಎಂದು ಹೇಳಿದರು.
ತಮ್ಮ ನೇತೃತ್ವದಲ್ಲಿ ನಡೆದ ಸಭೆಗೆ ರಮೇಶ್ ಕತ್ತಿ ಗೈರಾಗಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ರಮೇಶ ಕತ್ತಿ ಅವರು ಕೂಡ ನೇರವಾಗಿ ಬ್ಯಾಂಕ್ ಸಭೆಗೆ ಬರಲಿದ್ದಾರೆ. ಈ ಆಯ್ಕೆ ಹಿಂದೆ ಯಾವುದೇ ತಂತ್ರಗಾರಿಕೆ ಇಲ್ಲ. ಶಾಂತಿಯಿಂದ ಚುನಾವಣೆ ನಡೆಯಬೇಕು ಎನ್ನುವುದಷ್ಟೇ ನಮ್ಮ ಉದ್ದೇಶವಾಗಿತ್ತು ಎಂದರು. ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಗಾಧಿಗೆ ನಡೆದ ಚುನಾವಣೆಯಲ್ಲಿ ಅತೀ ಹೆಚ್ಚು ಸದಸ್ಯರ ಬಲ ಹೊಂದಿದ್ದ ಬಿಜೆಪಿ ಪಕ್ಷ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮತ್ತೆ ಕಿಂಗ್ ಮೇಕರ್ ಆಗಿದ್ದಾರೆ. ಆ ಮೂಲಕ ತಮ್ಮ ಶಕ್ತಿ ಏನೆಂಬುದನ್ನು ಅವರು ಮತ್ತೊಮ್ಮೆ ಸಾಭೀತುಪಡಿಸಿದ್ದಾರೆ.
Advertisement