ಹುಬ್ಬಳ್ಳಿ : ಹುಬ್ಬಳ್ಳಿಯ ಗೋಕುಲ ರಸ್ತೆಯ ಎಚ್.ಡಿ.ಬಿ.ಆರ್.ಟಿ.ಎಸ್. ಘಟಕದಲ್ಲಿ ನಡೆದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 27ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ನೂತನ 127 ಬಸ್ ಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ಚಾಲನೆ ನೀಡಿದರು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬಳಿಕ ಮಾತನಾಡಿದ ರಾಮಲಿಂಗಾರೆಡ್ಡಿ, ಸಾರಿಗೆ ಸಂಸ್ಥೆಗಳಲ್ಲಿ ಕಳೆದ 7-8 ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ, 9 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಮುಂದಾಗಿದ್ದು, 1 ಸಾವಿರ ಜನರು ಅನುಕಂಪ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಮುಂದಿನ 2 ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ತಿಳಿಸಿದರು.
ಅಪಘಾತ ಹಾಗೂ ಅಪರಾಧ ರಹಿತ ಸೇವೆ ಸಲ್ಲಿಸಿದ ಚಾಲಕರಿಗೆ ಬೆಳ್ಳಿ ಪದಕ ವಿತರಿಸಲಾಗುತ್ತಿದೆ. ಅಲ್ಲದೇ ಅಪಘಾತ ವಿಮಾ ಯೋಜನೆಯಡಿ ಮೃತಪಟ್ಟ ನೌಕರರ ಕುಟುಂಬಸ್ಥರಿಗೆ ರೂ. 1 ಕೋಟಿ ವಿಮೆಯನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು, ಯುಪಿಐ ಮೂಲಕ ಪ್ರಯಾಣಿಕರು ಟಿಕೆಟ್ ಪಡೆಯಬಹುದಾಗಿದೆ. ಸಾರಿಗೆ ಸಂಜೀವಿನಿ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಯೋಜನೆಯಡಿ ನೌಕರರು ಹಾಗೂ ಅವರ ಕುಟುಂಬಸ್ಥರು ಚಿಕಿತ್ಸಾ ಸೌಲಭ್ಯ ಪಡೆಯಬಹುದು ಎಂದರು.
ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮಾತನಾಡಿ, ಸಾರಿಗೆ ಸಂಸ್ಥೆಗಳಿಗೆ 800 ಬಸ್ ನೀಡುವ ನಿಟ್ಟಿನಲ್ಲಿ ಈಗಾಗಲೇ 584 ಬಸ್‌ಗಳನ್ನು ಒದಗಿಸಲಾಗಿದೆ. ಡಿಸೆಂಬರ್ ಅಂತ್ಯದೊಳಗೆ ಉಳಿದ ಬಸ್‌ಗಳು ಬರಲಿವೆ. ಶಕ್ತಿ ಯೋಜನೆಯು ಭಾರತ ದೇಶದಲ್ಲಿ ಉಚಿತ ಪ್ರಯಾಣ ನೀಡುವ ಮೂಲಕ ದಾಖಲೆ ಮಾಡಿದೆ. ಸರ್ಕಾರದ ಯಶಸ್ವಿ ಕಾರ್ಯಕ್ರಮಗಳು ಮುಂದುವರೆಯಲಿವೆ. ನೌಕರರ ಕುಟುಂಬ ಕಲ್ಯಾಣ ನಿಧಿ ಯೋಜನೆಯಡಿ ರೂ.5 ಲಕ್ಷದ ಬದಲಾಗಿ ರೂ.10 ಲಕ್ಷ ನೀಡಬೇಕು ಎಂದು ಅವರು ತಿಳಿಸಿದರು.
Advertisement