ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಶುಕ್ರವಾರ ತಿಳಿಸಿದ್ದಾರೆ.
ದರ್ಶನ್ ಗೆ ನೀಡಿರುವ ಮಧ್ಯಂತರ ಜಾಮೀನನ್ನು ವಜಾಗೊಳಿಸುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸುವ ರಾಜ್ಯ ಪೊಲೀಸರ ಪ್ರಸ್ತಾಪಕ್ಕೆ ಗೃಹ ಇಲಾಖೆ ಅನುಮತಿ ನೀಡಿದ್ದು, ಮುಂದಿನ ವಾರ ಅರ್ಜಿ ಸಲ್ಲಿಸಲಾಗುವುದು ಎಂದು ಅವರು ಹೇಳಿದ್ದಾರೆ.
ರಾಜ್ಯ ಪೊಲೀಸರ ಪ್ರತಿನಿಧಿಯಾಗಿ ಹಿರಿಯ ವಕೀಲ ವಿ.ಎನ್. ರಘುಪತಿ ಅವರನ್ನು ನೇಮಕ ಮಾಡಲಾಗಿದೆ.
ಕೊಲೆ ಪ್ರಕರಣದಲ್ಲಿ 131 ದಿನ ಜೈಲಿನಲ್ಲಿದ್ದ ನಟ ದರ್ಶನ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಹೈಕೋರ್ಟ್ ಆರು ವಾರಗಳ ಕಾಲ ಷರತ್ತುಬದ್ಧ ಜಾಮೀನು ನೀಡಿದ ನಂತರ ಅಕ್ಟೋಬರ್ 30 ರಂದು ಜೈಲಿನಿಂದ ಬಿಡುಗಡೆಯಾಗಿದ್ದರು.
ಅವರು ತೀವ್ರ ಬೆನ್ನುನೋವಿನಿಂದ ಬಳಲುತ್ತಿದ್ದು, ಬೆಂಗಳೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಅವರು ಇನ್ನೂ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಟನಿಗೆ ಶಸ್ತ್ರಚಿಕಿತ್ಸೆ ಮಾಡದಿದ್ದರೆ ಪಾರ್ಶ್ವವಾಯು ಬರುವ ಸಾಧ್ಯತೆ ಇದೆ ಎಂದು ಜಾಮೀನು ಅರ್ಜಿ ವಿಚಾರಣೆ ವೇಳೆಯಲ್ಲಿ ದರ್ಶನ್ ಪರ ವಕೀಲರು ಹೇಳಿದ್ದರು.
ದರ್ಶನ್‌ಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಒಪ್ಪಿಗೆ ಸೂಚಿಸಿರುವುದಾಗಿ ಗೃಹ ಸಚಿವ ಜಿ.ಪರಮೇಶ್ವರ ಬುಧವಾರ ತಿಳಿಸಿದ್ದರು. ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ಬಯಸಿದರೆ, ಅವರು ಮುಂದುವರಿಯಬಹುದು ಎಂದು ಗೃಹ ಇಲಾಖೆಯ ಕಾರ್ಯದರ್ಶಿಗೆ ತಿಳಿಸಿದ್ದೇನೆ ಎಂದು ಅವರು ಹೇಳಿದ್ದರು.
ದರ್ಶನ್ ಗೆ ಜಾಮೀನು ದೊರೆಯಲು ಅವರು ತೀವ್ರ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಹೇಳಲಾಗಿತ್ತು. ಈ ನಿಟ್ಟಿನಲ್ಲಿ 2022-23 ರಿಂದ ಚಿಕಿತ್ಸೆ ಪಡೆಯುತ್ತಿರುವುದಾಗಿ ನ್ಯಾಯಾಲಯಕ್ಕೆ ಎಲ್ಲ ದಾಖಲೆಗಳನ್ನು ನೀಡಲಾಗಿತ್ತು. ಅವರ ಆಯ್ಕೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೈಕೋರ್ಟ್ ಅನುಮತಿ ನೀಡಿತ್ತು. ಏಳು ದಿನಗಳೊಳಗೆ ಅವರು ನಡೆಸುತ್ತಿರುವ ವೈದ್ಯಕೀಯ ಚಿಕಿತ್ಸೆಯ ವಿವರಗಳು ಮತ್ತು ವರದಿಯನ್ನು ಸಲ್ಲಿಸುವಂತೆ ತಿಳಿಸಲಾಗಿತ್ತು.
Advertisement