ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯ ಗೃಹ ಇಲಾಖೆ ಅನುಮತಿ ನೀಡಿದೆ.
ರಾಜ್ಯ ಸರ್ಕಾರ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಆರೋಪಿ ನಟೇಶ್ ಗೆ ನೋಟಿಸ್ ಜಾರಿ ಮಾಡಿದ್ದು, ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಸರ್ಕಾರಿ ಅಧಿಕಾರಿ ವಿಚಾರಣೆ ನಡೆಸಲು ಸರ್ಕಾರದ ಅನುಮತಿ ಕಡ್ಡಾಯವಾಗಿದೆ. ಹೀಗಾಗಿ 17(A) ಅಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಒಂದು ತಿಂಗಳ ಹಿಂದೆ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿದ್ದರು. ಇದೀಗ ಅನುಮತಿ ನೀಡಿದ್ದು, ನಟೇಶ್ ಅವರಿಗೆ ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಈ ಹಿಂದೆ ಮುಡಾ ಆಯುಕ್ತರಾಗಿದ್ದ ನಟೇಶ್ ಅವರು, ಸೈಟ್ ಮರು ಹಂಚಿಕೆಯಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.
ನಟೇಶ್ ಅವರು ಈಗಾಗಲೇ ಇಡಿ ಅಧಿಕಾರಿಗಳ ಮುಂದೆ ಮೂರು ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ.
ಇನ್ನು ಇತ್ತೀಚೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಮಲ್ಲೇಶ್ವರಂನ 10ನೇ ಕ್ರಾಸ್ ನಲ್ಲಿರುವ ನಟೇಶ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಸತತ 33 ಗಂಟೆಗಳ ಕಾಲ ದಾಖಲೆ ಪರಿಶೀಲನೆ ಮಾಡಿ 4 ಬ್ಯಾಗ್ ಕೊಂಡೊಯ್ದಿದ್ದರು. ಬಳಿಕ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
Advertisement