ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ಶನಿವಾರ ಮತ್ತೊಂದು ದೂರು ದಾಖಲಿಸಿದೆ.
ಸ್ನೇಹಮಹಿ ಕೃಷ್ಣ ಅವರನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಇಂದು ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕಾಂಗ್ರೆಸ್ ದೂರಿಗೆ ಪ್ರತಿಕ್ರಿಯಿಸಿದ ಸ್ನೇಹಮಯಿ ಕೃಷ್ಣ ಅವರು, ಸಿಎಂ ಸಿದ್ದರಾಮಯ್ಯ ಅವರನ್ನೇ ಗಡಿಪಾರು ಮಾಡಬೇಕು ಎಂದು ತಿರುಗೇಟು ನೀಡಿದ್ದಾರೆ.
ನಾನು ಕಾನೂನುಬದ್ಧವಾದ ಹೋರಾಟ ನಡೆಸುತ್ತಿದ್ದೇನೆ. ಸಮಾಜಕ್ಕೆ ನ್ಯಾಯ ಕೊಡಿಸಲು ನಾನು ಹೋರಾಡುತ್ತಿದ್ದೇನೆ. ನನ್ನ ಗಡಿಪಾರು ಮಾಡಲು ಅವಕಾಶವಿಲ್ಲ. ಸಿದ್ದರಾಮಯ್ಯರನ್ನ ಗಡಿಪಾರು ಮಾಡಲು ಸಾಕಷ್ಟು ಅವಕಾಶಗಳಿವೆ. ಸುಳ್ಳು ಭಾಷಣ ಮಾಡಿ ರಾಜ್ಯದ ಜನರನ್ನ ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸಿಎಂ ಸಿದ್ದರಾಮಯ್ಯ ಅವರು ಸಮಾಜದ ಶಾಂತಿ ಹಾಳು ಮಾಡುತ್ತಿದ್ದಾರೆ. ನನ್ನ ವಿರುದ್ಧ ಹೋರಾಟ ಮಾಡಬೇಕು ಎಂದು ಅವರು ಕರೆ ನೀಡುತ್ತಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆಕ್ರೋಶ ವ್ಯಕ್ತಪಡಿಸಿದರು.
ಸ್ನೇಹಮಯಿ ಕೃಷ್ಣ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ 44 ಪ್ರಕರಣ ದಾಖಲಾಗಿದ್ದು, ಇದರಲ್ಲಿ 22 ಪ್ರಕರಣಗಳ ಎಫ್ ಐಆರ್ ನಮ್ಮಲ್ಲಿದೆ. ಈತ ರೌಡಿಶೀಟರ್ ಅಗಿದ್ದರೂ ಕಳೆದ ಮೂರುವರೆ ವರ್ಷದಿಂದ ಪೊಲೀಸರು ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಬ್ಲಾಕ್ ಮೇಲರ್ ವಿರುದ್ಧ ಪೊಲೀಸರು ಕ್ರಮ ಜರುಗಿಸಬೇಕು. ಭಾನುವಾರ ಬೆಳಗ್ಗೆ 10 ಗಂಟೆ ಒಳಗೆ ಎಫ್ ಐಆರ್ ದಾಖಲಿಸಿ ಆರೋಪಿಯನ್ನು ಬಂಧಿಸಬೇಕು. ಇಲ್ಲವಾದರೆ ಪೊಲೀಸ್ ಠಾಣೆ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತೇವೆ ಎಂದು ದೂರು ನೀಡಿದ ಬಳಿಕ ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ ಅವರು ಹೇಳಿದ್ದಾರೆ.
Advertisement