ಮಂಗಳೂರು: ಈಜುಕೊಳದಲ್ಲಿ ಮೂವರು ಯುವತಿಯರು ಮುಳುಗಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್ನಲ್ಲಿ ಭಾನುವಾರ ಮಧ್ಯಾಹ್ನ ಹೊತ್ತಿಗೆ ನಡೆದಿದೆ.
ಮಂಗಳೂರು ಹೊರವಲಯ ಉಚ್ಚಿಲ ಬೀಚ್ ಬಳಿಯ ರೆಸಾರ್ಟ್ನ ಈಜುಕೊಳದಲ್ಲಿ ಈಜಾಡುವಾಗ ಏಕಾಏಕಿ ಮುಳುಗಿ ಮೂವರು ಯುವತಿಯರು ಮೃತಪಟ್ಟಿದ್ದು, ಮೃತಪಟ್ಟವರನ್ನು ಮೈಸೂರು ಕುರುಬರಹಳ್ಳಿಯ ನಾಲ್ಕನೇ ಕ್ರಾಸ್ ನಿವಾಸಿ ನಿಶಿತ ಎಂ.ಡಿ. (21ವ), ಮೈಸೂರು ರಾಮಾನುಜ ರಸ್ತೆ, ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20ವ), ಮೈಸೂರು ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21ವ) ಎಂದು ಗುರುತಿಸಲಾಗಿದೆ.
ನಿನ್ನೆ ವಾರಾಂತ್ಯ ಮೂವರು ಸ್ನೇಹಿತೆಯರು ಮಂಗಳೂರು ಕಡೆಗೆ ಪ್ರವಾಸಕ್ಕೆಂದು ಬಂದಿದ್ದರು. ಇಂದು ಬೆಳಗ್ಗೆ ಹೊರವಲಯದ ಬೀಚ್ ಬಳಿ ಬಂದವರು ರೆಸಾರ್ಟ್ ಗೆ ಆಗಮಿಸಿ ರೂಂ ಬುಕ್ ಮಾಡಿದ್ದರು. ನಂತರ ವಿನೋದಕ್ಕೆಂದು ಆಟವಾಡಲು ಸ್ವಿಮ್ಮಿಂಗ್ ಪೂಲ್ ಗೆ ಇಳಿದು ಆಟವಾಡುತ್ತಿದ್ದರು. ಈ ವೇಳೆ ಕೊಳದ ಒಂದು ಬದಿ ಆರು ಅಡಿಯಷ್ಟು ಆಳವಿದ್ದು, ಆಯತಪ್ಪಿ ಓರ್ವ ಯುವತಿ ಮುಳುಗಿದ್ದಾಳೆ. ಆಕೆಯ ರಕ್ಷಣೆಗೆ ತೆರಳಿದ ಉಳಿದ ಇಬ್ಬರೂ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಉಳ್ಳಾಲ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Advertisement