ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೋಮವಾರ ಮಾಹಿತಿ ನೀಡಿದೆ.
ಕಳೆದೆರಡು ದಿನಗಳಿಂದ ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರೆದಿದ್ದು, ಶನಿವಾರ ಹಲವೆಡೆ ಮಳೆಯಾಗಿತ್ತು ಆದರೆ ಭಾನುವಾರ ಮೋಡವಿದ್ದರೂ ಮಳೆ ಬಂದಿರಲಿಲ್ಲ.
ಇದೀಗ ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಪ್ರಮುಖವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದ್ದು, ಉಪ್ಪಿನಂಗಡಿ, ಶ್ರವಣಬೆಳಗೊಳ, ಹೊಸಕೋಟೆ, ಅರಕಲಗೂಡು, ಚಿಂತಾಮಣಿ, ನಾಗಮಂಗಲ, ಚಾಮರಾಜನಗರ, ಕೋಲಾರದಲ್ಲೂ ಮಳೆ ಬೀಳಲಿದೆ ಎಂದು ಹೇಳಲಾಗಿದೆ.
ಮುಂದಿನ 2 ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ. ನವೆಂಬರ್ 20ರ ಬಳಿಕ ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದ್ದು, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ17.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಕುಸಿದ ತಾಪಮಾನ
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದ ಹಿನ್ನಲೆಯಲ್ಲಿ ನಗರದ ವಿವಿಧೆಡೆ ತಾಪಮಾನ ಕುಸಿತವಾಗಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Advertisement