ಬೆಂಗಳೂರು: ಡಿಸೆಂಬರ್ ಎರಡನೇ ವಾರದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ಸಜ್ಜಾಗಿದ್ದು, ಅಧಿವೇಶನದಲ್ಲಿ ಮುಡಾ, ವಕ್ಫ್, ಆಸ್ತಿ ವಿವಾದ, ಬಿಪಿಎಲ್ ಕಾರ್ಡ್ ರದ್ದು ಹಾಗೂ ವಾಲ್ಮೀಕಿ ನಿಗಮ ಹಗರಣ ವಿಚಾರ ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳು ಮುಂದಾಗಿದ್ದು, ಇದಕ್ಕೆ ಸಮರ್ಥ ತಿರುಗೇಟು ನೀಡಲು ಪ್ರತ್ಯಸ್ತ್ರ ಸಿದ್ಧಪಡಿಸುವಂತೆ ಸಚಿವರು, ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.
ಸೋಮವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರೊಂದಿಗೆ ಮಹತ್ವಹ ಚರ್ಚೆ ನಡೆಸಿದರು.
ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಐಟಿ/ಬಿಟಿ ಮತ್ತು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಕೆಲವು ಹಿರಿಯ ಸಚಿವರು ಉಪಸ್ಥಿತರಿದ್ದರು.
ಸಭೆಯಲ್ಲಿ ಯಾವುದೇ ವಿವಾದಾತ್ಮಕ ಹೇಳಿಕೆ ನೀಡದಂತೆ ಸಚಿವರಿಗೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಇದೇ ವೇಳೆ ಅನರ್ಹ ಫಲಾನುಭವಿಗಳ ಬಳಿ ಇರುವ ಬಿಪಿಎಲ್ ಕಾರ್ಡ್ ರದ್ದು, ರೈತರಿಗೆ ವಕ್ಫ್ ಬೋರ್ಡ್ ಕಳುಹಿಸಿರುವ ನೋಟಿಸ್ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.
ಖಾಸಗಿ ವಿಶ್ವವಿದ್ಯಾನಿಲಯ ಮಸೂದೆಗಳು ಮತ್ತು ಠೇವಣಿದಾರರನ್ನು ರಕ್ಷಿಸುವ ಮಸೂದೆ ಸೇರಿದಂತೆ ಹಲವು ಮಸೂದೆಗಳನ್ನು ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ಯೋಜಿಸುತ್ತಿದೆ.
ಉಭಯ ಸದನಗಳಲ್ಲಿ ಮಂಡಿಸಲಾಗುವ ಈ ಮಸೂದೆಗಳ ಕುರಿತು ಮುಖ್ಯಮಂತ್ರಿಗಳು ಸಚಿವರು ಹಾಗೂ ಶಾಸಕರ ಸಲಹೆ ಪಡೆದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಕೋವಿಡ್ -19 ಹಗರಣದ ತನಿಖೆಯನ್ನು ಎಸ್‌ಐಟಿ ವಹಿಸಿಕೊಳ್ಳುವ ಬಗ್ಗೆಯೂ ಅವರು ಚರ್ಚಿಸಿದರು. ತನಿಖಾ ತಂಡದ ಮುಖ್ಯಸ್ಥರಾಗಿರುವ ಅಧಿಕಾರಿಗಳ ಬಗ್ಗೆಯೂ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.
Advertisement