ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಫೆಡರೇಷನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ಕರ್ನಾಟಕ ನಾಳೆ ಕರೆ ನೀಡಿದ್ದ ಮದ್ಯ ಮಾರಾಟ ಬಂದ್ ಕರೆಯನ್ನು ವಾಪಸ್ ಪಡೆದುಕೊಂಡಿದೆ. ಸಿಎಂ ಸಿದ್ದರಾಮಯ್ಯ ಸಂಘದ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಹಿನ್ನೆಲೆ ಈ ನಿರ್ಧಾರ ಕೈಗೊಂಡಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಸೇರಿದಂತೆ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಸೋಸಿಯೇಷನ್ ಒಂದು ದಿನ ಪ್ರತಿಭಟನೆ ನಡೆಸಲು ಮಂದಾಗಿತ್ತು. ಬಂದ್‌ಗೂ ಮುನ್ನಾ ದಿನವಾದ ಇಂದು ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಂಘದ ಸದಸ್ಯರನ್ನು ಭೇಟಿಯಾಗಿ ಸಿದ್ದರಾಮಯ್ಯ ಮಾತುಕತೆ ನಡೆಸಿದರು.
ಈ ವೇಳೆ ಸಂಘದವರ ಬೇಡಿಕೆಗಳನ್ನು ಈಡೇರಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು. ಪ್ರತಿಭಟನೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದ ರಾಜ್ ಹೆಗ್ಡೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಮದ್ಯ ಮಾರಾಟಗಾರರಿಗೆ ಕಿರುಕುಳ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಬಂದ್ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಸಭೆಯಲ್ಲಿ ಬೇಡಿಕೆಗಳನ್ನು ಪರಿಹರಿಸಲು ಸಮಿತಿಯನ್ನೊಂದನ್ನು ರಚಿಸಲು ಮುಖ್ಯಮಂತ್ರಿ ಆದೇಶಿಸಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸಲು ನಿರ್ದೇಶಿಸಿದ್ದಾರೆ ಎಂದು ತಿಳಿಸಿದರು.
ಅಸೋಸಿಯೇಷನ್ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುವುದು, ಸರ್ಕಾರಕ್ಕೆ ಹೆಚ್ಚಿನ ಆದಾಯ ಬರುವಲ್ಲಿ ಲಿಕ್ಕರ್ ಮಾರಾಟಗಾರರನ್ನು ಬೆಂಬಲಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು, ಮದ್ಯ ಮಾರಾಟಗಾರರಿಗೆ ಯಾವುದೇ ಕಿರುಕುಳ ನಡೆಯದಂತೆ ಕ್ರಮ ಕೈಗೊಳ್ಳುವಂತೆ ಅಬಕಾರಿ ಆಯುಕ್ತರಿಗೆ ಸೂಚಿಸಿದರು.
ಅಬಕಾರಿ ಇಲಾಖೆಯ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸಲಾಗುವುದು, ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ, ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
Advertisement