ಬೆಂಗಳೂರು: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವು ಡಿ.9 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ಸರಕಾರ ನಿರ್ಧರಿಸಿದೆ.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಅಧಿವೇಶನ ಕರೆಯುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಡತ ರವಾನಿಸಿದ್ದು, ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ.
ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನದ ದಿನಾಂಕ, ಸ್ಥಳ ನಿಗದಿ ಮಾಡಿ ರಾಜ್ಯಪಾಲರಿಗೆ ಶಿಫಾರಸ್ಸು ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗೆ ನೀಡಲಾಗಿತ್ತು.
ಅದರಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಡಿ.9 ರಿಂದ 20ರವರೆಗೆ ವಿಧಾನಮಂಡಲದ ಉಭಯ ಸದನಗಳ ಅಧಿವೇಶನವನ್ನು ಕರೆಯುವಂತೆ ರಾಜ್ಯಪಾಲರಿಗೆ ಕಡತ ಕಳುಹಿಸಿಕೊಟ್ಟಿದ್ದರು. ಇದೀಗ ಕಡತಕ್ಕೆ ಗೆಹ್ಲೋಟ್ ಅವರು ಸಹಿ ಮಾಡಿದ್ದಾರೆನ್ನಲಾಗಿದ್ದು, ಡಿಸೆಂಬರ್ 9ರಂದು ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗುತ್ತಿದೆ.
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ಅಂತಿಮ ದಿನಾಂಕ ನಿಗದಿಯಾಗುತ್ತಿದ್ದಂತೆ ಕನಿಷ್ಠ ಬೆಂಬಲ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಸಜ್ಜಾಗುತ್ತಿದ್ದಾರೆ. ಪ್ರತಿಭಟನೆಯಲ್ಲಿ 1 ಲಕ್ಷಕ್ಕೂ ಹೆಚ್ಚು ರೈತರು ಭಾಗವಹಿಸುವ ನಿರೀಕ್ಷೆ ಇದೆ.
ಪ್ರತಿಭಟನೆಯಲ್ಲಿ ಮಂಡ್ಯದಿಂದ 10 ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಏಕೀಕೃತ ಕರ್ನಾಟಕ ರಾಜ್ಯ ರೈತಸಂಘದ ಸಂಸ್ಥಾಪಕ ಅಧ್ಯಕ್ಷ ಪಚ್ಚೆ ನಂಜುಂಡಸ್ವಾಮಿ ತಿಳಿಸಿದ್ದಾರೆ.
Advertisement