ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದು ಬೆಂಗಳೂರು, ಮಂಗಳೂರು ಸೇರಿದಂತೆ 4 ಕಡೆಗಳ 25 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.
ಟೌನ್ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಅವರ ಬನಶಂಕರಿಯ 3ನೇ ಹಂತದ ವಿಶ್ವೇಶ್ವರಯ್ಯ ರಸ್ತೆಯಲ್ಲಿರುವ ಮನೆ ಮೇಲೆ ದಾಳಿ ಮಾಡಿದ್ದು ಅಲ್ಲಿ ಕಂಡುಬಂದ ಅಪಾರ ಮೌಲ್ಯದ ಆಸ್ತಿ ದಾಖಲೆಗಳು, ಚಿನ್ನಾಭರಣ ನೋಡಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ. 23ಕ್ಕೂ ಹೆಚ್ಚು ಚಿನ್ನದ ಸರ, 28ಕ್ಕೂ ಹೆಚ್ಚು ಜೊತೆ ಓಲೆ, ಮುತ್ತಿನ ಹಾರ ಪತ್ತೆಯಾಗಿದೆ. ಇದು ಅಷ್ಟೇ ಅಲ್ಲದೆ ಕೋಟಿ ರೂಪಾಯಿ ಮೌಲ್ಯದ ಚಿನ್ನದ ನೆಕ್ಲೆಸ್, ಚಿನ್ನದ ಉಂಗುರಗಳು, 8 ಲಕ್ಷ ರೂಪಾಯಿ ನಗದು ಪತ್ತೆಯಾಗಿದ್ದು 8ಕ್ಕೂ ಹೆಚ್ಚು ದುಬಾರಿ ಬೆಲೆಯ ಬ್ರಾಂಡೆಡ್ ವಾಚ್ಗಳು ಸಿಕ್ಕಿವೆ.
ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಅಬಕಾರಿ ಇಲಾಖೆ ಎಸ್ಪಿ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ಬೆಳಗ್ಗೆ 6 ಗಂಟೆಯ ವೇಳೆ ಅಬಕಾರಿ ಇಲಾಖೆ ಎಸ್ಪಿ ಮೋಹನ್ ಮನೆ ಮೇಲೆ ರೇಡ್ ಮಾಡಲಾಗಿದ್ದು. ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಕೃಷ್ಣವೇಣಿ ಎಂಸಿ ವಿರುದ್ಧ ಹಾಗೂ ಮಂಡ್ಯದಲ್ಲಿ ಮಹೇಶ್, ಎಂಡಿ ಕಾವೇರಿ ನೀರವಾಯಿ ನಿಗಮ ವಿರುದ್ಧ ಬೆಂಗಳೂರಿನ ಸರ್ಫೇಸ್ ವಾಟರ್ ಡಾಟಾ ಸೆಂಟರ್‌ನಲ್ಲಿ ದಾಳಿ ನಡೆಸಲಾಗಿದೆ. ಬೆಂಗಳೂರು ನಗರದ ಅಬಕಾರಿ ಅಧೀಕ್ಷಕ ಮೋಹನ್ ಕೆ ಸೇರಿದಂತೆ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಜುಲೈನಲ್ಲಿ, ಕರ್ನಾಟಕ ಲೋಕಾಯುಕ್ತ, ರಾಜ್ಯದ 12 ಅಧಿಕಾರಿಗಳ ವಿರುದ್ಧ ದಾಳಿಗಳನ್ನು ನಡೆಸಿತು. ಬೆಂಗಳೂರು ನಗರದಲ್ಲಿ ಆರು ಅಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳು ಹಾಗೂ ಯಾದಗಿರಿ ಮತ್ತು ತುಮಕೂರಿನಲ್ಲಿ ತಲಾ ಒಬ್ಬ ಅಧಿಕಾರಿಗಳ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಅಧಿಕಾರಿಗಳಿಗೆ ಸೇರಿದ 54 ಸ್ಥಳಗಳ ಮೇಲೆ ದಾಳಿ ನಡೆಸಲಾಗಿತ್ತು.
Advertisement