ದಕ್ಷಿಣ ಕನ್ನಡ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಹಲವು ವಾಹನಗಳು ಜಖಂಗೊಂಡಿವೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಖಾಸಗಿ ಬಸ್, ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ.
ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಖಾಸಗಿ ಬಸ್ನಲ್ಲಿ ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದರು. ಮರಳಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಕಾರು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆಯುವ ಮೂಲಕ ಸರಣಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದ್ದು, ಹಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ರವಾನಿಸಲಾಗಿದೆ. ಉಪ್ಪಿನಂಗಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Advertisement