ಮಡಿಕೇರಿ: ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ್ದ ಆರೋಪಿಯನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.
ವಕೀಲ ವಿದ್ಯಾಧರ್ ಗೌಡ ಬಂಧಿತ ಆರೋಪಿಯಾಗಿದ್ದು ಇದೀಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಸಪ್ತ ಸಾಗರ ಎಂಬ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಶ್ರಿವತ್ಸ ಭಟ್ ಎಂಬುವವರು ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಬಗ್ಗೆ ನಿಂದಿಸಿ ಪೋಸ್ಟ್ ಮಾಡಿದ್ದರು. ಬಳಿಕ ಇದರ ಸ್ಕ್ರೀನ್ ಶಾಟ್ ಎಲ್ಲಾ ಕಡೆ ವೈರಲ್ ಆಗಿದ್ದು, ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಶ್ರಿವತ್ಸ ಭಟ್ರನ್ನು ಬಂಧನ ಹಾಗೂ ಕಾನೂನು ಕ್ರಮಕ್ಕೆ ಒತ್ತಾಯಿಸಿ ಜಿಲ್ಲೆಯ ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು ಅಲ್ಲದೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೂ ಲಿಖಿತ ದೂರು ನೀಡಿದ್ದವು.
ಈ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ತನಿಖೆಯ ನಂತರ ಸುಳ್ಯದ ನಿವಾಸಿ ವೃತ್ತಿಯಲ್ಲಿ ವಕೀಲ ವಿದ್ಯಾಧರ ಗೌಡ (66) ಎಂಬುವರನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಪ್ರಕರಣದಲ್ಲಿ ಹೆಚ್ಚಿನ ತನಿಖೆಗಳು ನಡೆಯುತ್ತಿವೆ.
Advertisement