ಶಿವಮೊಗ್ಗ: ಸಂವಿಧಾನದ ಅರಿವು ಮೂಡಿಸುವ ಪ್ರಯತ್ನದ ಭಾಗವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 10 ನಗರಗಳ ಪ್ರಮುಖ ಉದ್ಯಾನವನಗಳಲ್ಲಿ ಸಂವಿಧಾನ ಪೀಠಿಕೆ ಪ್ರತಿಕೃತಿ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಸಂವಿಧಾನದ ಸಂದೇಶವನ್ನು ತಿಳಿಸಲು ಸಮಾಜ ಕಲ್ಯಾಣ ಇಲಾಖೆಯು ಈ ರೀತಿಯ ಮೊದಲ ಕ್ರಮ ಕೈಗೊಂಡಿದ್ದು, ಇದಕ್ಕಾಗಿ 3 ಕೋಟಿ ರೂ. ವೆಚ್ಚ ಮಾಡಲು ಉದ್ದೇಶಿಸಿದೆ.
ಬೆಂಗಳೂರು, ಶಿವಮೊಗ್ಗ, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ತುಮಕೂರು ಮತ್ತು ವಿಜಯಪುರದಲ್ಲಿ ಈ ಪ್ರತಿಕೃತಿ ನಿರ್ಮಾಣ ಮಾಡಲಾಗುತ್ತಿದೆ. ಇದು 10 ಅಡಿ ಎತ್ತರ ಮತ್ತು 6 ಅಡಿ ಅಗಲವಿದ್ದು, ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಇರಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಎಲ್.ನರಸಿಂಹಮೂರ್ತಿ ಸರಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರತಿಕೃತಿ ನಿರ್ಮಿಸಲು ಮತ್ತು ಸಂವಿಧಾನದ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಪ್ರತಿ ನಗರ ಪಾಲಿಕೆಗೆ ರೂ.25 ಲಕ್ಷ ಮತ್ತು ಬಿಬಿಎಂಪಿಗೆ 50 ಲಕ್ಷ ರೂ. ನೀಡಲಾಗುತ್ತಿದೆ.
ಶಿವಮೊಗ್ಗದ ಅಲ್ಲಮಪ್ರಭು ಫ್ರೀಡಂ ಪಾರ್ಕ್‌ನಲ್ಲಿ ಇಟ್ಟಿಗೆ ಮತ್ತು ಗ್ರಾನೈಟ್ ಬಳಸಿ ಪ್ರತಿಕೃತಿ ನಿರ್ಮಿಸಲಾಗುತ್ತಿದೆ. ಮುಂದಿನ ವರ್ಷ ಗಣರಾಜ್ಯೋತ್ಸವದಂದು ಸಂವಿಧಾನ ಪೀಠಿಕೆ ಪ್ರತಿಕೃತಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲೇಶಪ್ಪ ಡಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.
ಜೂನ್ 2023 ರಲ್ಲಿ ರಾಜ್ಯ ಸರ್ಕಾರವು ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಪ್ರತಿದಿನ ಓದುವುದನ್ನು ಕಡ್ಡಾಯಗೊಳಿಸಿ ಆದೇಶವನ್ನು ಹೊರಡಿಸಿತು. ಎಲ್ಲಾ ಸರ್ಕಾರಿ ಕಛೇರಿಗಳಲ್ಲೂ ಪ್ರಸ್ತಾವನೆಯನ್ನು ಪ್ರದರ್ಶಿಸಲಾಗುತ್ತಿದೆ. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ರಾಜ್ಯ ಸರ್ಕಾರ ಸಂವಿಧಾನ ಪೀಠಿಕೆ ಓದುವ ಮೆಗಾ ಕಾರ್ಯಕ್ರಮವನ್ನು ಆಯೋಜಿಸಿತ್ತು.
Advertisement