ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ ಬುಧವಾರ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಗುರುವಾರ ದೆಹಲಿಗೆ ಭೇಟಿ ನೀಡುತ್ತಿದ್ದಾರೆ.
ಸಿದ್ದರಾಮಯ್ಯ ಅವರು ಶುಕ್ರವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿದ್ದು, ಈ ವೇಳೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣು ಗೋಪಾಲ್ ಅವರನ್ನು ಡಿ.ಕೆ.ಶಿವಕುಮಾರ್ ಅವರ ಜೊತೆಗೂಡಿ ಭೇಟಿಯಾಗಿ ಸಚಿವ ಸಂಪುಟ ಪುನಾರಚನೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಉಪಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 3 ವಿಧಾನಸಭಾ ಸ್ಥಾನಗಳಲ್ಲೂ (ಶಿಗ್ಗಾಂವ್, ಸಂಡೂರು ಮತ್ತು ಚನ್ನಪಟ್ಟಣ) ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಮುಡಾ, ಅಬಕಾರಿ ಹಾಗೂ ವಾಲ್ಮೀಕಿ ನಿಗಮ ಹಗರಣಗಳ ನಡುವಲ್ಲೂ ಗೆಲುವು ಸಾಧಿಸಿರುವುದು ಸಿದ್ದರಾಮಯ್ಯ ಅವರ ವಿಶ್ವಾಸ ಹೆಚ್ಚಿದೆ.
ಸಿಡಬ್ಲ್ಯುಸಿ ಸಭೆಯ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಹೈಕಮಾಂಡ್ ಜೊತೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ನಾಲ್ವರು ಎಂಎಲ್‌ಸಿಗಳ ನಾಮನಿರ್ದೇಶನ ಮತ್ತು ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಎಂಎಲ್‌ಸಿ ಹುದ್ದೆಗಳಿಗೆ ಅಭ್ಯರ್ಥಿಗಳ ಹೆಸರನ್ನು ಈಗಾಗಲೇ ಅಂತಿಮಗೊಳಿಸಲಾಗಿದ್ದು, ಕಾಂಗ್ರೆಸ್ ವರಿಷ್ಠರ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.
ಕೆಪಿಸಿಸಿ ಅಧ್ಯಕ್ಷರ ವಿಷಯದಲ್ಲಿ ಸಿದ್ದರಾಮಯ್ಯ ಅವರ ಬಹುಕಾಲದ ಆಪ್ತ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮುಂಚೂಣಿಯಲ್ಲಿದ್ದಾರೆ.
ಹಾವೇರಿ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ವಿರುದ್ಧ ಪಕ್ಷದ ಅಭ್ಯರ್ಥಿ ಯಾಸೀರ್ ಅಹಮದ್ ಖಾನ್ ಪಠಾಣ್ ಗೆಲುವಿನಲ್ಲಿ ಸತೀಶ್ ಪ್ರಮುಖ ಪಾತ್ರ ವಹಿಸಿದ್ದರು.
ಈ ಎರಡೂ ವಿಚಾರಗಳ ಬಗ್ಗೆ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರ ಜತೆ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಇದಲ್ಲದೆ, ಸಚಿವ ಸಂಪುಟ ಪುನಾರಚನೆಯ ವಿಷಯವೂ ಚರ್ಚೆಯ ಸಂದರ್ಭದಲ್ಲಿ ಪ್ರಸ್ತಾಪವಾಗಬಹುದು ಎಂದು ಮೂಲಗಳು ತಿಳಿಸಿವೆ. ನವದೆಹಲಿ ಪ್ರವಾಸದ ವೇಳೆ ಸಿಎಂ ಸಿದ್ದರಾಮಯ್ಯ ಹಲವು ಕೇಂದ್ರ ಸಚಿವರನ್ನೂ ಭೇಟಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿಯವರು "ಸಚಿವ ಸಂಪುಟ ಪುನಾರಚನೆ ಮತ್ತು ಖಾತೆ ಬದಲಾವಣೆಯ ಬಗ್ಗೆ ಮಾತುಕತೆ ನಡೆಯುತ್ತಿದೆ. ಸಂಪುಟ ಪುನಾರಚನೆ ಮಾಡದೆಯೂ ಇರಬಹುದು. ನನಗಂತೂ ಎರಡು ವರ್ಷಕ್ಕೆ ಸ್ಥಾನ ಬದಲಾವಣೆ ಎಂದು ಹೇಳಿಲ್ಲ. ದೆಹಲಿಯಿಂದ ಲಿಸ್ಟ್ ಬಂದರೆ ಎಲ್ಲರೂ ಬದಲಾಗಬೇಕು. ಲಿಸ್ಟ್ ನಲ್ಲಿ ಹೆಸರು ಬಂದರೆ ಮನೆ ಖಾಲಿ ಮಾಡಿಕೊಂಡು ಹೋಗಬೇಕು. ದೆಹಲಿ ಹೈಕಮಾಂಡ್ ನಾಯಕರದ್ದೇ ಅಂತಿಮ ತೀರ್ಮಾನ. ಅವರೇ ಫೈನಲ್ ಎಂದು ಹೇಳಿದರು.
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಮಾತನಾಡಿದ ಅವರು, ಎಲ್ಲರನ್ನು ಕರೆದುಕೊಂಡು ಹೋಗುವುದು ಕಠಿಣ ಕೆಲಸ ಎಂದು ನನಗೆ ತಿಳಿದಿದೆ, ಆದರೆ, 2028 ರ ಚುನಾವಣೆಗೂ ಮುನ್ನ ಪಕ್ಷವನ್ನು ಮುನ್ನಡೆಸಲು ನಾನು ಬಯಸುತ್ತೇನೆ ಎಂದು ತಿಳಿಸಿದರು.
Advertisement