ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು' ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿರುದ್ಧ FIR ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ಸೈಯ್ಯದ್ ಅಬ್ಬಾಸ್ ಎಂಬಾತ ಚಂದ್ರಶೇಖರ ಸ್ವಾಮೀಜಿ ಅವರು, ನಮ್ಮ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಆಗ್ರಹಿಸಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ಸ್ವಾಮೀಜಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತ 299ರ ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 'ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ. ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ನಿರಾಕರಿಸುವ ಕಾನೂನು ತರಬೇಕು. ಬೇರೆಯವರ ಭೂಮಿಯನ್ನು ಕಸಿದುಕೊಳ್ಳುವುದು ಧರ್ಮವಲ್ಲ. ಮೊದಲು ವಕ್ಫ್ ಬೋರ್ಡ್ ಇಲ್ಲದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದರು.
ಚಂದ್ರಶೇಖರ್ ಸ್ವಾಮೀಜಿಗಳ ಹೇಳಿಕೆ ಕುರಿತಂತೆ ಎಚ್ ಸಿ ಮಹದೇವಪ್ಪ ಸೇರಿದಂತೆ ಕಾಂಗ್ರೆಸ್ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದರು. ಇನ್ನು ತಮ್ಮ ಹೇಳಿಕೆ ವಿವಾದಾತ್ಮಕ ಸ್ವರೂಪ ಪಡೆದುಕೊಂಡಿದ್ದರಿಂದ ಎಚ್ಚೆತ್ತ ಸ್ವಾಮೀಜಿಗಳು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದರು.
ಮುಸಲ್ಮಾನರೂ ಸಹ ಈ ದೇಶದ ಪ್ರಜೆಗಳೇ. ಎಲ್ಲರಂತೆ ಅವರಿಗೂ ಮತದಾನದ ಹಕ್ಕು ಇರುತ್ತದೆ. ತಾನು ಬಾಯಿ ತಪ್ಪಿ ನೀಡಿದ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ, ಅದಕ್ಕಾಗಿ ಹೃತ್ಪೂರ್ವಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದ್ದರು.
Advertisement