ಹಾಸನದಲ್ಲಿ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶಕ್ಕೆ ಹೈಕಮಾಂಡ್ ಒಪ್ಪಿಗೆ, ಸದ್ಯಕ್ಕೆ ಇಲ್ಲ ಸಚಿವ ಸಂಪುಟ ಪುನಾರಚನೆ, ಪ್ರಧಾನಿ ಮೋದಿ- ಸಿಎಂ ಭೇಟಿ; ರಾಜ್ಯದ ಯೋಜನೆಗಳಿಗೆ ನೆರವಿಗೆ ಮನವಿ- ಇವು ಇಂದಿನ ಪ್ರಮುಖ ಸುದ್ದಿಗಳು-29-11-2024

News highlights of the day
ಸುದ್ದಿ ಮುಖ್ಯಾಂಶಗಳು online desk

1.  ಪ್ರಧಾನಿ ಮೋದಿ- ಸಿಎಂ ಭೇಟಿ; ರಾಜ್ಯದ ಯೋಜನೆಗಳಿಗೆ ನೆರವಿಗೆ ಮನವಿ

ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಅಲ್ಪಾವಧಿಯ ಕೃಷಿ ಸಾಲದ ಮಿತಿಯನ್ನು ಸರಿಪಡಿಸಲು 10,000 ಕೋಟಿ ರೂಪಾಯಿ ಆರ್ಥಿಕ ನೆರವು ಮತ್ತು ಮೇಕೆದಾಟು ಸಮತೋಲನ ಜಲಾಶಯ, ಕಳಸಾ ಬಂಡೂರಿ ಯೋಜನೆಗಳಿಗೆ ತುರ್ತು ಅನುಮತಿ ನೀಡಬೇಕೆಂದು ಮನವಿ ಸಲ್ಲಿಸಿದ್ದಾರೆ. ದೆಹಲಿಯ ಪಾರ್ಲಿಮೆಂಟ್ ಕಾಂಪ್ಲೆಕ್ಸ್ ನಲ್ಲಿ ನಡೆದ ಸಭೆಯಲ್ಲಿ, ಕೃಷಿ, ಜಲಸಂಪನ್ಮೂಲ ಮತ್ತು ನಗರ ಮೂಲಸೌಕರ್ಯ ಸೇರಿದಂತೆ ನಿರ್ಣಾಯಕ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುವ ಹಲವಾರು ವಿಷಯಗಳಿಗೆ ಕೇಂದ್ರ ಸರ್ಕಾರ ತುರ್ತು ಮಧ್ಯಸ್ಥಿಕೆ ವಹಿಸುವಂತೆ ಸಿದ್ದರಾಮಯ್ಯ ಒತ್ತಾಯಿಸಿದರು. ಉಪಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವ ಡಿ ಕೆ ಶಿವಕುಮಾರ್, ಇಂಧನ ಸಚಿವ ಕೆ ಜೆ ಜಾರ್ಜ್ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಸಿಎಂ ಜತೆ ಸಭೆಯಲ್ಲಿ ಹಾಜರಿದ್ದರು.

2. ಸದ್ಯಕ್ಕೆ ಇಲ್ಲ ಸಚಿವ ಸಂಪುಟ ಪುನಾರಚನೆ

ಎಐಸಿಸಿ ಅಧಿವೇಶನದಲ್ಲಿ ಭಾಗಿಯಾಗಲು ದೆಹಲಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಚಿವ ಸಂಪುಟ ಪುನರ್ ರಚನೆಯ ಸುದ್ದಿಗಳನ್ನು ತಳ್ಳಿ ಹಾಕಿದ್ದಾರೆ. ಸಂಪುಟ ಪುನರ್ ರಚನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಸಂಪುಟ ಪುನಾರಚನೆ, ಕುರಿತಂತೆ ಹೈಕಮಾಂಡ್ ಜತೆ ಚರ್ಚೆ ಮಾಡಿಲ್ಲ. ನಾಗೇಂದ್ರ ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ ಈಗಲೇ ಅಲ್ಲ ಎಂದು ತಿಳಿಸಿದ್ದಾರೆ. ಸಚಿವ ಸಂಪುಟ ಪುನಾರಚನೆ ಮಾಡುವ ಸಂದರ್ಭ ಬಂದಿಲ್ಲ, ಒಂದೇ ಒಂದು ಖಾತೆ ಖಾಲಿ ಇದೆ ಅಷ್ಟೇ, ಅದನ್ನು ಭರ್ತಿ ಮಾಡುವ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

3. ಹಾಸನದಲ್ಲಿ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶಕ್ಕೆ ಹೈಕಮಾಂಡ್ ಒಪ್ಪಿಗೆ

ಹಾಸನದಲ್ಲಿ ಡಿಸೆಂಬರ್ 05 ರಂದು ನಡೆಸಲು ಉದ್ದೇಶಿಸಿರುವ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶಕ್ಕೆ ಕಾಂಗ್ರೆಸ್ ನಲ್ಲಿ ಕೆಲವು ನಾಯಕರು ವಿರೋಧ ವ್ಯಕ್ತಪಡಿಸಿದ ಬೆಳವಣಿಗೆಗಳ ನಡುವೆಯೇ ಸಮಾವೇಶ ನಡೆಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಒಪ್ಪಿಗೆ ನೀಡಿದ್ದು, ಪಕ್ಷದ ವೇದಿಕೆಯಲ್ಲಿ ಸಮಾವೇಶ ನಡೆಸುವುದಕ್ಕೆ ಸೂಚಿಸಿದ್ದಾರೆ. ಸಮಾವೇಶದ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದೆ. ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನೂ ಸಂಘಟಕರು ಆಹ್ವಾನಿಸಿದ್ದಾರೆ ಎಂದು ತಿಳಿಸಿದ್ದಾರೆ.

4. ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು; ಕಳಪೆ IV ಕಾರಣ

ಬಳ್ಳಾರಿಯ ಸರ್ಕಾರಿ ಆಸ್ಪತ್ರೆಯಲ್ಲಿ 15 ದಿನಗಳ ಅಂತರದಲ್ಲಿ 5 ಮಂದಿ ಬಾಣಂತಿಯರು ಸಾವನ್ನಪ್ಪುವುದಕ್ಕೆ ಕಳಪೆ ಮಟ್ಟದ IV ಗ್ಲೂಕೋಸ್ ಕಾರಣ ಎಂದು ತಿಳಿದುಬಂದಿದೆ. ತನಿಖಾ ಸಂಸ್ಥೆ ಸರ್ಕಾರಕ್ಕೆ ಈ ಸಂಬಂಧ ವರದಿ ಸಲ್ಲಿಸಿದ್ದು, ಸಿಸೇರಿಯನ್ ವೇಳೆ‌ ನೀಡಿದ್ದ IV ಗ್ಲುಕೋಸ್ ಕಳಪೆ ಗುಣಮಟ್ಟದ್ದಾಗಿತ್ತು ಎಂದು ಹೇಳಿದ್ದು, ದಾಸ್ತಾನಿನಲ್ಲಿರುವ ಇಂಟ್ರಾವೆನಸ್ ದ್ರಾವಣ ಬಳಕೆ ಮಾಡದಂತೆ ಆರೋಗ್ಯ ಇಲಾಖೆ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ.

5. ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ FIR

ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು' ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿರುದ್ಧ FIR ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಸೈಯ್ಯದ್ ಅಬ್ಬಾಸ್ ಎಂಬಾತ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸ್ವಾಮೀಜಿ ನಮ್ಮ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸ್ವಾಮೀಜಿ ಈ ಹೇಳಿಕೆ ನೀಡಿದ್ದರು.

6. ರಾಜ್ಯಪಾಲರ ಅಧಿಕಾರ ಮೊಟಕಿಗೆ ರಾಜ್ಯ ಸರ್ಕಾರ ಮುಂದು

ಬೆಳಗಾವಿಯಲ್ಲಿ ಡಿಸೆಂಬರ್ 9ರಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗಲಿರುವ ವಿಶ್ವವಿದ್ಯಾಲಯಗಳ ತಿದ್ದುಪಡಿ ಮಸೂದೆ, ಕಾರ್ಮಿಕ ಕಲ್ಯಾಣ ನಿಧಿಯನ್ನು ಹೆಚ್ಚಿಸುವ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ತಿದ್ದುಪಡಿ ಮಸೂದೆ ಸೇರಿದಂತೆ ಹಲವು ಮಸೂದೆಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ ತಿದ್ದುಪಡಿ ವಿಧೇಯಕದ ಮೂಲಕ ವಿವಿಗೆ ಸಂಬಂಧಿಸಿದಂತೆ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ ಹಾಕಲು ಸರ್ಕಾರ ಮುಂದಾಗಿದ್ದು, ಕಾಯ್ದೆ ಜಾರಿಯ ನಂತರ ಮುಖ್ಯಮಂತ್ರಿಗಳು ವಿವಿಯ ಕುಲಪತಿಯಾಗಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com