ಬಿಡಿಎ ಭೂ ವಿವಾದ: ನನ್ನ ವರ್ಚಸ್ಸು ಹಾಳು ಮಾಡಲು ಕಾಂಗ್ರೆಸ್ ಯತ್ನ; ಆರೋಪಗಳಿಗೆ ಆರ್.ಅಶೋಕ್ ತಿರುಗೇಟು

ಇದೇ ಕಾಂಗ್ರೆಸ್‌ನ ಕೇಂದ್ರ ಸರ್ಕಾರ ಅಂದು ನೇಮಿಸಿದ್ದ ರಾಜ್ಯಪಾಲರು ಮತ್ತು ಘನ ನ್ಯಾಯಾಲಯ ನಾನು ತಪ್ಪಿತಸ್ಥ ಅಲ್ಲ ಎಂದು ಅಭಿಪ್ರಾಯಪಟ್ಟಿದೆ. ಆದರೂ ಕಾಂಗ್ರೆಸ್‌ ಪಕ್ಷ ನ್ಯಾಯಾಲಯಕ್ಕಿಂತ ದೊಡ್ಡದಾಗಲು ಯತ್ನಿಸಿ ತೀರ್ಪು ನೀಡಲು ಮುಂದಾಗಿದೆ ಎಂದು ಹೇಳಿದರು.
ವಿಪಕ್ಷ ನಾಯಕ ಆರ್.ಅಶೋಕ್
ವಿಪಕ್ಷ ನಾಯಕ ಆರ್.ಅಶೋಕ್
Updated on

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ನಾಲ್ವರು ಸಚಿವರು ನನ್ನ ಬಗ್ಗೆ ಕಳಂಕ ಸೃಷ್ಟಿಸಲು ಹಳೆಯ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಇದರಲ್ಲಿ ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದಲ್ಲಿ ಅರಿಶಿನ-ಕುಂಕುಮದ ಮೂಲಕ ಭೂಮಿ ಬಂದಿದೆ. ಆದರೆ ನಾನು ಹಣ ಕೊಟ್ಟು ಭೂಮಿ ಖರೀದಿ ಮಾಡಿದ್ದೇನೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.

ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟನೆ ನೀಡಿದ ಅವರು, ನನ್ನನ್ನು ಭೂ ಕಬಳಿಕೆದಾರ ಎಂದು ಕರೆದಿರುವ ಕಾಂಗ್ರೆಸ್‌ನ ನಾಲ್ಕು ಸಚಿವರು ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಆದರೆ ಇದೇ ಕಾಂಗ್ರೆಸ್‌ನ ಕೇಂದ್ರ ಸರ್ಕಾರ ಅಂದು ನೇಮಿಸಿದ್ದ ರಾಜ್ಯಪಾಲರು ಮತ್ತು ಘನ ನ್ಯಾಯಾಲಯ ನಾನು ತಪ್ಪಿತಸ್ಥ ಅಲ್ಲ ಎಂದು ಅಭಿಪ್ರಾಯಪಟ್ಟಿದೆ. ಆದರೂ ಕಾಂಗ್ರೆಸ್‌ ಪಕ್ಷ ನ್ಯಾಯಾಲಯಕ್ಕಿಂತ ದೊಡ್ಡದಾಗಲು ಯತ್ನಿಸಿ ತೀರ್ಪು ನೀಡಲು ಮುಂದಾಗಿದೆ ಎಂದು ಹೇಳಿದರು.

ಇದು ನನ್ನ ವರ್ಚಸ್ಸಿಗೆ ಕಳಂಕ ತರುವ ಪ್ರಯತ್ನ ಎಂದು ಬಣ್ಣಿಸಿರುವ ಬಿಜೆಪಿಯ ಹಿರಿಯ ನಾಯಕ, ಭೂ ವ್ಯವಹಾರದಲ್ಲಿ ಎಲ್ಲವೂ ಕಾನೂನುಬದ್ಧವಾಗಿದೆ. ಈ ಪ್ರಕರಣದ ಬಗ್ಗೆ ಆರೋಪ ಬಂದಾಗ ರಾಜ್ಯದಲ್ಲಿ ಕಾಂಗ್ರೆಸ್‌ನ ಕೇಂದ್ರ ಸರ್ಕಾರವೇ ನೇಮಿಸಿದ ರಾಜ್ಯಪಾಲ ಹಂಸರಾಜ್‌ ಭಾರಧ್ವಾಜ್‌ ಇದ್ದರು. ಅವರು ಕೂಡ ಈ ಪ್ರಕರಣವನ್ನು ತನಿಖೆಗೆ ವಹಿಸಿಲ್ಲ. ಅಷ್ಟೇ ಅಲ್ಲದೆ ನ್ಯಾಯಾಲಯ ಕೂಡ ಇದರ ವಿರುದ್ಧ ತನಿಖೆ ಮಾಡಿಸಲು ಮುಂದಾಗಲಿಲ್ಲ. ರಾಜ್ಯಪಾಲರು ಹಾಗೂ ನ್ಯಾಯಾಲಯವೇ ನಾನು ತಪ್ಪಿತಸ್ಥ ಅಲ್ಲ ಎಂದು ಅಭಿಪ್ರಾಯಪಟ್ಟರೆ, ಕಾಂಗ್ರೆಸ್‌ ಪಕ್ಷ ಮಾತ್ರ ಇದರಲ್ಲಿ ತೀರ್ಪು ನೀಡಲು ಮುಂದಾಗಿದೆ. ಅಂದರೆ ಕಾಂಗ್ರೆಸ್‌ ಪಕ್ಷ ತನ್ನನ್ನು ನ್ಯಾಯಾಲಯಕ್ಕಿಂತ ದೊಡ್ಡದು ಎಂದುಕೊಂಡಿದೆ ಎಂದು ವ್ಯಂಗ್ಯವಾಡಿದರು.

ವಿಪಕ್ಷ ನಾಯಕ ಆರ್.ಅಶೋಕ್
ಸಿಎಂ ರಾಜೀನಾಮೆಗೆ ಪಕ್ಷದೊಳಗೆ ಯಾವುದೇ ಒತ್ತಡವಿಲ್ಲ: ಸಚಿವ ಪರಮೇಶ್ವರ್

ಬುಧವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಅಶೋಕ ಲೊಟ್ಟೆಗೊಲ್ಲಹಳ್ಳಿಯಲ್ಲಿ ಅಕ್ರಮವಾಗಿ ಜಮೀನು ಖರೀದಿಸಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾದ ನಂತರ ಗಿಫ್ಟ್ ಡೀಡ್ ಮೂಲಕ ಬಿಡಿಎಗೆ ಮರಳಿಸಿದ್ದಾರೆ ಎಂದು ಆರೋಪಿಸಿದರು.

ಅಶೋಕ ಅವರು ಕಾನೂನಾತ್ಮಕವಾಗಿ ಜಮೀನು ಖರೀದಿಸಿದ್ದರೂ ಹಳೆಯ ಪ್ರಕರಣದ ಬಗ್ಗೆ ಕಾಂಗ್ರೆಸ್ ನಾಯಕರು ತಮ್ಮ ಹೆಸರನ್ನು ಹಾಳು ಮಾಡಲು ಚರ್ಚೆ ನಡೆಸುತ್ತಿದ್ದಾರೆ. ಪ್ರಕರಣ ನ್ಯಾಯಾಲಯದ ಮೆಟ್ಟಿಲೇರುವ ಮುನ್ನವೇ ಜಮೀನು ವಾಪಸ್ ನೀಡಿದ್ದೆ ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣದಲ್ಲಿ ಹೈಕೋರ್ಟ್ ಆದೇಶದ ನಂತರ ನಿವೇಶನಗಳನ್ನು ವಾಪಸ್ ನೀಡಲಾಗಿದೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.

ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹಾಗೂ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ್ ಕೂಡ ಸಿಎಂ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎಂದರು. "ನೀವು ಆರೋಪಗಳನ್ನು ಎದುರಿಸುತ್ತಿರುವಾಗ, ನೀವು ಅದನ್ನು ನ್ಯಾಯಾಲಯದಲ್ಲಿ ಪರಿಹರಿಸಿಕೊಳ್ಳಬೇಕು ಮತ್ತು ಪ್ರತಿಪಕ್ಷ ನಾಯಕರ ವಿರುದ್ಧ ಸೇಡಿನ ರಾಜಕೀಯವನ್ನುಮಾಡಬಾರದು" ಎಂದು ಕಾಂಗ್ರೆಸ್ ನಾಯಕರಿಗೆ ಅಶೋಕ್ ತಿವಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com