
ಬೆಂಗಳೂರು: ಭಾರೀ ಮಳೆ ಹಾಗೂ ಸಿಡಿಲಿನ ಹೊಡೆತದಿಂದಾಗಿ ಹಾರೋಹಳ್ಳಿ ಮತ್ತು ಟಿ.ಕೆ.ಹಳ್ಳಿಗೆ ಸಂಪರ್ಕ ಕಲ್ಪಿಸುವ ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಉಂಟಾದ ತಾಂತ್ರಿಕ ದೋಷವನ್ನು ಸರಿಪಡಿಸಲಾಗಿದ್ದು, ನೀರು ಪೂರೈಕೆ ಕಾರ್ಯವನ್ನು ಪುನರಾರಂಭಿಸಲಾಗಿದೆ ಎಂದು ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಅವರು ಗುರುವಾರ ತಿಳಿಸಿದ್ದಾರೆ.
ಪಂಪಿಂಗ್ ಸ್ಟೇಷನ್‌ಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲಿ ಸಿಡಿಲು ಬಡಿದು ಟ್ರಾನ್ಸ್‌ಫಾರ್ಮರ್‌ಗಳಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿತ್ತು. ಪರಿಣಾಮ ಬೆಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪಂಪಿಂಗ್ ಸ್ಟೇಷನ್ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿಯೂ ವ್ಯತ್ಯಯ ಉಂಟಾಗಿತ್ತು. ಇದರಿಂದ ನೀರು ಪಂಪ್ ಮಾಡುವುದನ್ನು ನಿಲ್ಲಿಸಲಾಗಿತ್ತು.
ಬಳಿಕ ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಮತ್ತು ಬಿಡಬ್ಲ್ಯೂಎಸ್‌ಎಸ್‌ಬಿ ಸಿಬ್ಬಂದಿ ತುರ್ತು ದುರಸ್ತಿ ಕಾರ್ಯವನ್ನು ನಡೆಸುವ ಮೂಲಕ ತಾಂತ್ರಿಕ ಸಮಸ್ಯೆಯನ್ನು ನಿವಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯುತ್ ವೈಫಲ್ಯದಿಂದ ಸುಮಾರು 10 ಗಂಟೆಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯಗಳು ಎದುರಾಗಿತ್ತು. ಇದೀಗ ನೀರು ಪಂಪ್ ಮಾಡುವ ಪ್ರಕ್ರಿಯೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ.
ರಾತ್ರಿ ವೇಳೆ ಸಮಸ್ಯೆ ಎದುರಾಗಿದ್ದರಿಂದ ಹೆಚ್ಚಿನ ಪರಿಣಾಮ ಬೀರಲಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
Advertisement