
ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ನಡೆದಿರುವ ಲಂಚ ಆರೋಪ ಕುರಿತು ನಾಗಮೋಹನ್ ದಾಸ್ ಸಮಿತಿ ತನಿಖೆ ನಡೆಸುತ್ತಿದ್ದು, ತನಿಖೆ ಬೆನ್ನಲ್ಲೇ ಸರ್ಕಾರ ಬಾಕಿ ಉಳಿಸಿಕೊಂಡಿರುವ ಶೇ 25ರಷ್ಟು ಬಿಲ್‌ಗಳನ್ನು ಶೀಘ್ರಗತಿಯಲ್ಲಿ ಪಾವತಿ ಮಾಡಬೇಕೆಂದು ಬಿಬಿಎಂಪಿ ಗುತ್ತಿಗೆದಾರರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ.ಮಂಜುನಾಥ್ ಮಾತನಾಡಿ, ತನಿಖೆ ಪ್ರಗತಿಯನ್ನು ಗಮಿಸಿದ್ದು, ಬಾಕಿ ಉಳಿದಿರುವ ಶೇ.25ರಷ್ಟು ಬಿಲ್‌ಗಳನ್ನು ತೆರುವುಗೊಳಿಸುವಂತೆ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂಬುದು ತಿಳಿದುಬಂದಿದೆ.
ಸಾಕಷ್ಟು ಗುತ್ತಿಗೆದಾರರು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದು, ಸರ್ಕಾರ ಈ ಕುರಿತು ಶೀಘ್ರಗತಿಯಲ್ಲಿ ಆದೇಶ ಹೊರಡಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಬಿಬಿಎಂಪಿ ಮುಖ್ಯ ಎಂಜಿನಿಯರ್ ಬಿ.ಎಸ್.ಪ್ರಹ್ಲಾದ್ ಅವರು ಮಾತನಾಡಿ, ಈ ವಿಚಾರ ತಮ್ಮ ವ್ಯಾಪ್ತಿಗೆ ಬರುವುದಿಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿ, ಈ ಸಮಸ್ಯೆ ಬಗ್ಗೆ ರಾಜ್ಯ ಸರ್ಕಾರವೇ ನಿರ್ಧಾರ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಈ ಹಿಂದೆ ಗುತ್ತಿಗೆದಾರರು ಉಪವಾಸ ಸತ್ಯಾಗ್ರಹ ನಡೆಸಿದ್ದರು. ಬಿಬಿಎಂಪಿ ವ್ಯಾಪ್ತಿಯಲ್ಲಿನ ಎಲ್ಲ ಮೂಲಸೌಕರ್ಯ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ತಿಳಿಸಿದ್ದರು. ಆದರೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದಿದ್ದರು.
Advertisement