ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರ ದಲಿತರು ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಸಿದುಕೊಂಡು ಮುಸ್ಲಿಮರಿಗೆ ನೀಡುತ್ತಿದೆ ಎಂದು ಹರಿಯಾಣ ಚುನಾವಣಾ ಪ್ರಚಾರದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೀಡಿದ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ, ಪಕ್ಷದ ಹಿರಿಯ ಮುಖಂಡ ಎಚ್.ಎಂ.ರೇವಣ್ಣ ಅವರು ಮಾತನಾಡಿ, ಸಾಂವಿಧಾನಿಕವಾಗಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗವನ್ನು ಸ್ಥಾಪಿಸಿದ ಕೀರ್ತಿ ಕರ್ನಾಟಕಕ್ಕೆ ಸಲ್ಲುತ್ತದೆ, ಶೋಷಿತ ವರ್ಗಗಳ ಕಲ್ಯಾಣದಲ್ಲಿ ಕರ್ನಾಟಕ ಇತರೆ ರಾಜ್ಯಗಳಿಗಿಂತ ಮುಂದಿದೆ. ರಾಜ್ಯದಲ್ಲಿ ದಲಿತರ ಮೀಸಲಾತಿಯನ್ನು ಕಿತ್ತುಕೊಂಡು ಬೇರೆಯವರಿಗೆ ನೀಡಿದ ಉದಾಹರಣೆ ಇಲ್ಲ ಎಂದು ಎಂದು ಹೇಳಿದರು.
ಮೋದಿ ಸುಳ್ಳಿನ ನಾಯಕ. ಅವರು ದೇಶದ ಏಕತೆ ಮತ್ತು ಅಭಿವೃದ್ಧಿಯ ಬಗ್ಗೆ ಎಂದಿಗೂ ಮಾತನಾಡುವುದಿಲ್ಲ. ಚುನಾವಣಾ ಸಮಯದಲ್ಲಿ ಗಿಮಿಕ್ ಮಾಡುತ್ತಾರೆಂದು ಕಿಡಿಕಾರಿದರು.
ಹಾವನೂರು ಆಯೋಗದ ವರದಿ ಜಾರಿಯಾದ ನಂತರ ಶೋಷಿತ ವರ್ಗಗಳಿಗೆ ಉತ್ತಮ ಅವಕಾಶಗಳು ದೊರೆತಿವೆ. ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಕೊಡುಗೆ ಇಂದಿಗೂ ಸ್ಮರಣೀಯವಾಗಿದೆ. ದಲಿತರಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಲು ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ. ದಲಿತ ಮೀಸಲಾತಿಯನ್ನು ಕಿತ್ತು ಒಬಿಸಿಗೆ ನೀಡಿಲ್ಲ, ಗುತ್ತಿಗೆ ನೌಕರರನ್ನು ನೇಮಿಸಿ, ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಸಂದರ್ಭದಲ್ಲಿಯೂ ಮೀಸಲಾತಿ ಜಾರಿಯಲ್ಲಿದೆ ಎಂದು ತಿಳಿಸಿದರು.
Advertisement