ಜಾತಿ ಗಣತಿ ವರದಿ: ಸಚಿವ ಸಂಪುಟ, ಹೈಕಮಾಂಡ್ ಜೊತೆ ಚರ್ಚಿಸಿ ತೀರ್ಮಾನ- ಸಿಎಂ ಸಿದ್ದರಾಮಯ್ಯ

ರಾಜ್ಯದ ಕಾಂಗ್ರೆಸ್ ನ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ. ವಿರೋಧಪಕ್ಷಗಳು, ನನ್ನ ಮೇಲಿನ ಸುಳ್ಳು ಆರೋಪಗಳನ್ನು ಮಾಡಿ ರಾಜಿನಾಮೆ ಬೇಡಿದರೆ, ರಾಜಿನಾಮೆ ಕೊಡಲು ಸಾಧ್ಯವಿಲ್ಲ.
ರಾಯಚೂರಿನಲ್ಲಿ ಸಿಎಂ ಸಿದ್ದರಾಮಯ್ಯ.
ರಾಯಚೂರಿನಲ್ಲಿ ಸಿಎಂ ಸಿದ್ದರಾಮಯ್ಯ.
Updated on

ರಾಯಚೂರು: ಕಾಂತರಾಜು ನೇತೃತ್ವದ ಸಮಿತಿ ಸಿದ್ಧಪಡಿಸಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ (ಜಾತಿ ಗಣತಿ ವರದಿ) ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಇನ್ನೂ ನಿರ್ಧರಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದರು.

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಮಾತನಾಡಿದ ಅವರು, ಜಾತಿ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೇಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ವರದಿಯಲ್ಲಿ ಸಣ್ಣ ಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು ಎಂದು ಹೇಳಿದರು.

ಪರಿಶಿಷ್ಟ ಜಾತಿ ಸಮುದಾಯಗಳಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಸರ್ಕಾರವು ಆದೇಶವನ್ನು ಸ್ವಾಗತಿಸಿದೆ. ಆದರೆ, ಸಮಿತಿಯ ಶಿಫಾರಸನ್ನು ಜಾರಿಗೊಳಿಸುವ ಮುನ್ನ ಸಚಿವ ಸಂಪುಟ ಹಾಗೂ ಹೈಕಮಾಂಡ್‌ನಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಮುಡಾ ವಿಚಾರದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲದ ಕಾರಣ ಸಿಎಂ ಸ್ಥಾನದಿಂದ ಕೆಳಗಿಳಿಯುವುದಿಲ್ಲ ಎಂದು ಪುನರುಚ್ಚರಿಸಿದರು.

ರಾಜ್ಯದ ಕಾಂಗ್ರೆಸ್ ನ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ. ವಿರೋಧಪಕ್ಷಗಳು, ನನ್ನ ಮೇಲಿನ ಸುಳ್ಳು ಆರೋಪಗಳನ್ನು ಮಾಡಿ ರಾಜಿನಾಮೆ ಬೇಡಿದರೆ, ರಾಜಿನಾಮೆ ಕೊಡಲು ಸಾಧ್ಯವಿಲ್ಲ. ಸುಳ್ಳು ಆರೋಪಗಳನ್ನು ಮಾಡಿದರೆ, ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ ಎಂದರು.

ರಾಯಚೂರಿನಲ್ಲಿ ಸಿಎಂ ಸಿದ್ದರಾಮಯ್ಯ.
ಮುಡಾ ಬೆನ್ನಲ್ಲೇ ಬುಡಾ ಹಗರಣ ಬೆಳಕಿಗೆ: ಸ್ವಪಕ್ಷ ಶಾಸಕರಿಂದಲೇ ದೂರು; ಬಳ್ಳಾರಿ ಕಾಂಗ್ರೆಸ್'ನಲ್ಲಿ ಶುರುವಾಯ್ತಾ ಶೀತಲ ಸಮರ?

ಪಕ್ಷದ ಹೈಕಮಾಂಡ್ ಹಾಗೂ ಸಚಿವ ಸಂಪುಟ ನನ್ನ ಬೆಂಬಲಕ್ಕಿದೆ. ನಾನು ಯಾವುದೇ ಅಕ್ರಮ ಎಸಗಿಲ್ಲ ಎಂದರೆ ನಾನೇಕೆ ರಾಜೀನಾಮೆ ನೀಡಬೇಕು? ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಕೂಡ ನನ್ನ ರಾಜೀನಾಮೆಗೆ ಒತ್ತಾಯಿಸುವುದಿಲ್ಲ ಎಂದು ಹೇಳಿದ್ದಾರೆ... ಮಾಜಿ ಸಚಿವ ಜಿ.ಟಿ.ದೇವೇಗೌಡ ಕೂಡ ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಬಿಜೆಪಿಯವರು ಮಾತ್ರ ನನ್ನ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆಂದು ಕಿಡಿಕಾರಿದರು.

ನಂತರ ಮಾನ್ವಿಯಲ್ಲಿ ನಡೆದ ಸ್ವಾಭಿಮಾನ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಸಿಎಂ, ಸದಾ ರಾಜೀನಾಮೆ ಕೇಳುವ ಬಿಜೆಪಿ ನಾಯಕರ ಧೋರಣೆಯಿಂದ ಬೇಸತ್ತು ಹೋಗಿದ್ದೇನೆ. ಆದರೆ, ನಿಮ್ಮೆಲ್ಲರಿಗಾಹಿ (ಜನರ) ನನ್ನ ಹೋರಾಟವನ್ನು ಮುಂದುವರಿಸುತ್ತೇನೆ. ಮಹಾತ್ಮ ಗಾಂಧೀಜಿಯವರು ‘ಒಳಗಿನ ಧ್ವನಿ ಎಲ್ಲಕ್ಕಿಂತ ಶ್ರೇಷ್ಠ’ ಎಂದು ಹೇಳಿದ್ದಾರೆ. ನನ್ನ ಆತ್ಮಸಾಕ್ಷಿಯು ಸ್ಪಷ್ಟವಾಗಿದೆ ಎಂದು ಹೇಳಿದರು.

ಹೊಸ ಜಾತಿ ಗಣತಿಗೆ ಆಗ್ರಹ

ಏತನ್ಮಧ್ಯೆ ಹಳೇ ಜಾತಿ ಗಣತಿ ವರದಿ ಬಿಡುಗಡೆಗೆ ತೀವ್ರ ವಿರೋಧ ವ್ಯಕ್ತಪಡಿಸುವುದಾಗಿ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಹಾಗೂ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರು ಶನಿವಾರ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಹೇಳುತ್ತಿರುವುದನ್ನು ಗಮನಿಸಿದ್ದೇನೆ. ಪ್ರಸ್ತುತ ವರದಿಯನ್ನು ಸರಿಯಾಗಿ ಮತ್ತು ವೈಜ್ಞಾನಿಕವಾಗಿ ಸಿದ್ಧಪಡಿಸದ ಕಾರಣ ನಾವು ಹೊಸದಾಗಿ ಸಮೀಕ್ಷೆಗೆ ಒತ್ತಾಯಿಸುತ್ತಿದ್ದೇವೆ ವೀರಶೈವ ಸಮುದಾಯದಲ್ಲಿ ಅನೇಕ ಉಪವರ್ಗಗಳಿದ್ದು, ಸಮೀಕ್ಷೆಯ ಸಮಯದಲ್ಲಿ ಅವುಗಳನ್ನು ಸರಿಯಾಗಿ ನಮೂದಿಸಿಲ್ಲ. ವೀರಶೈವ ಲಿಂಗಾತರ ಒಳ ಪಂಗಡಗಳನ್ನು ಅದರಲ್ಲಿ ಬೇರೆ ಬೇರೆಯಾಗಿ ಗಣತಿ ಮಾಡಿ ವೀರಶೈವ ಲಿಂಗಾಯತರ ಒಟ್ಟು ಸಂಖ್ಯೆ ಕಡಿಮೆ ತೋರಿಸಲಾಗಿದೆ ಎಂದು ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮಾತನಾಡಿ, ಪ್ರಸ್ತುತ ಇರುವ ವರದಿ ಕುರಿತು ವಿವಿಧ ಸಮುದಾಯಗಳೊಂದಿಗೆ ಸಮಗ್ರ ಚರ್ಚೆ ನಡೆಸಬೇಕೆಂದು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com