
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್, ಪವಿತ್ರಾ ಹಾಗೂ ಇತರೆ ಕೆಲವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮತ್ತೊಮ್ಮೆ ಮುಂದೂಡಿದೆ.
ದರ್ಶನ್ ಪರ ವಕೀಲರು ಪ್ರಕರಣದ ತನಿಖೆ ಬಗ್ಗೆ ಎತ್ತಿದ್ದ ಪ್ರಶ್ನೆಗಳಿಗೆ ಇಂದು ಎಸ್ಪಿಪಿ ಪ್ರಸನ್ನ ಕುಮಾರ್ ಉತ್ತರಗಳನ್ನು ನೀಡಿದರು. ಎಸ್ಪಿಪಿ ಸುದೀರ್ಘ ವಾದ ಮಂಡಿಸಿದ್ದರಿಂದ ಅಂತಿಮವಾಗಿ ನ್ಯಾಯಾಲಯದ ಸಮಯ ಮೀರಿದ ಕಾರಣ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಪ್ರಕರಣದ ವಿಚಾರಣೆಯನ್ನು ನಾಳೆ ಮಧ್ಯಾಹ್ನ 12:30ಕ್ಕೆ ಮುಂದೂಡಿದೆ.
ದರ್ಶನ್ ಪರ ವಾದಿಸಿದ್ದ ಹಿರಿಯ ವಕೀಲ ಸಿವಿ ನಾಗೇಶ್ ಅವರು ತನಿಖೆಯಲ್ಲಿ ಹಲವು ಲೋಪದೋಷಗಳಿವೆ. ಪೊಲೀಸರೇ ಸಾಕ್ಷ್ಯಗಳನ್ನು ಸೃಷ್ಟಿ ಮಾಡಿ, ಕತೆ ಹೆಣೆದಿದ್ದಾರೆ ಎಂದು ಟೀಕಿಸಿದ್ದರು. ಇದಕ್ಕೆ ಉತ್ತರಿಸಿದ ಪ್ರಸನ್ನ ಕುಮಾರ್ ಅವರು, ದರ್ಶನ್ ಅಂಡ್ ಗ್ಯಾಂಗ್ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಿದ ರೀತಿ ಹಾಗೂ ಪ್ರತ್ಯಕ್ಷದರ್ಶಿಗಳು ನೀಡಿರುವ ಹೇಳಿಕೆ ಎಲ್ಲವನ್ನೂ ಉಲ್ಲೇಖಿಸಿ ಇದು ದರ್ಶನ್ ರಕ್ತಚರಿತ್ರೆ ಎಂದು ವಾದಿಸಿದರು.
ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಹಾಗೂ ಇತರ ಆರೋಪಿಗಳು ನಾಲ್ಕು ತಿಂಗಳಿನಿಂದ ಜೈಲಿನಲ್ಲಿದ್ದಾರೆ. ಅದಾಗಲೇ ನಾಲ್ಕು ಆರೋಪಿಗಳಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ನಾಳೆಗೆ ವಿಚಾರಣೆ ಮುಂದೂಡಲಾಗಿದೆಯಾದರೂ ನಾಳೆಯೂ ಸಹ ಜಾಮೀನು ಸಿಗುವುದು ಅನುಮಾನವೇ ಎನ್ನಲಾಗುತ್ತಿದೆ. ನಾಳೆಯೂ ಸಹ ಎಸ್ಪಿಪಿ ಅವರ ವಾದ ಮುಂದುವರೆಯುವ ಸಾಧ್ಯತೆ ಇದೆ.
Advertisement