ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ ಮಾಡುವ ಅಪಮಾನವಲ್ಲವೇ? ಆರ್.ಅಶೋಕ್

ರಾಜಕೀಯ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನ ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ ಎಂದಿದ್ದಾರೆ.
ವಿಪಕ್ಷ ನಾಯಕ ಆರ್. ಅಶೋಕ್
ವಿಪಕ್ಷ ನಾಯಕ ಆರ್. ಅಶೋಕ್
Updated on

ಬೆಂಗಳೂರು: ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ. ಬಿಜೆಪಿಯ ಮೂಲಸಿದ್ಧಾಂತವಾದ 'ಅಂತ್ಯೋದಯ'ದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನ ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನ ಸಾಕಾರಗೊಳಿಸುವ ಯಾವ ಕ್ರಮಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನ ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ ಎಂದಿದ್ದಾರೆ.

ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯಮ್ಯ ನವರ 'ಆತ್ಮಸಾಕ್ಷಿ'ಗೆ ಕೆಲವು ಪ್ರಶ್ನೆಗಳು.

ತಮಗೆ ನಿಜವಾಗಿಯೂ ಜಾತಿಗಣತಿಯ ಬಗ್ಗೆ ಬದ್ಧತೆ ಇದ್ದಿದ್ದರೆ, 2018ರಲ್ಲೇ ಕಾಂತರಾಜು ವರದಿಯನ್ನ ಏಕೆ ಸ್ವೀಕರಿಸಿ ಜಾರಿ ಮಾಡಲಿಲ್ಲ? ಹತ್ತು ವರ್ಷಗಳ ಹಿಂದೆ ಕೈಗೊಂಡ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ, ಅನೇಕ ಜನರ ಮನೆಗಳಿಗೆ ಭೇಟಿಯೇ ನೀಡಿಲ್ಲ ಎಂಬ ದೂರುಗಳಿವೆ. ಹೀಗಿರುವಾಗ ಈ ವರದಿಯನ್ನ ಈಗ ಮುನ್ನೆಲೆಗೆ ತರುವ ತರಾತುರಿ ಏಕೆ?

ವಿಪಕ್ಷ ನಾಯಕ ಆರ್. ಅಶೋಕ್
ಜಾತಿ ಗಣತಿ ವರದಿ ಜಾರಿ ಕುರಿತು ಅಕ್ಟೋಬರ್ 18 ರಂದು ಸಚಿವ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

ಈ ಅವೈಜ್ಞಾನಿಕ ಜಾತಿ ಜನಗಣತಿ ವರದಿ ಸ್ವೀಕರಿಸದಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ. ಇದನ್ನ ಬೆಂಬಲಿಸಿ ಸ್ವತಃ ಮಾನ್ಯ ಉಪಮುಖ್ಯಮಂತ್ರಿಗಳು ಹಾಗು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರೇ ಸಹಿ ಮಾಡಿದ್ದಾರೆ. ತಮ್ಮದೇ ಪಕ್ಷದ ಹಿರಿಯ ನಾಯಕರು, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪನವರೂ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅನೇಕ ಮಠಾಧೀಶರು, ಧಾರ್ಮಿಕ ಮುಖಂಡರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗ ಕಳೆದು 17 ತಿಂಗಳಿನಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಂದು ಸರ್ವಸಮ್ಮತವಾದ ನಿಲುವಿಗೆ ಬರುವ ಬದಲು ಈಗ ದಿಢೀರನೆ ಏಕಾಏಕಿ ವರದಿ ಸ್ವೀಕರಿಸಲು ಮುಂದಾಗಿರುವುದು ಯಾವ ಕಾರಣಕ್ಕೆ? ಹಗರಣಗಳ ಸುಳಿಯಲ್ಲಿ ಸಿಲುಕಿ ಮುಜುಗರ ಅನುಭವಿಸುತ್ತಿರುವ ಪರಿಸ್ಥಿತಿಯಿಂದ ಜನರ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ವರದಿಯನ್ನ ಒಂದು ದಾಳವಾಗಿ ಬಳಸಲಾಗುತ್ತಿದೆಯೇ?

ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ? ಸಾಮಾಜಿಕ ನ್ಯಾಯವೆಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆಯಲ್ಲವೇ? ಎಂದು ಪ್ರಶ್ನಿಸಿದ್ದಾರೆ. ಅಕ್ಟೋಬರ್ 18ರಂದು ನಡೆಯುವ ಸಂಪುಟ ಸಭೆಗೂ ಮುನ್ನ ಮಾನ್ಯ ಮುಖ್ಯಮಂತ್ರಿಗಳ 'ಆತ್ಮಸಾಕ್ಷಿ' ಈ ಪ್ರಶೆಗಳನ್ನ ಆತ್ಮಾವಲೋಕನ ಮಾಡಿ ಉತ್ತರ ನೀಡುತ್ತದೆ ಎಂದು ನಿರೀಕ್ಷಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com