
ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕರು, ನಿರ್ಧಾರ ಹಿಂಪಡೆಯದಿದ್ದರೆ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದು, ಕಾನೂನು ಆಯ್ಕೆಗಳನ್ನೂ ಪರಿಶೀಲಿಸುತ್ತಿದ್ದಾರೆ.
2022ರ ಏಪ್ರಿಲ್‌ನಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಭಾಗಿಯಾದವರ ವಿರುದ್ಧದ ಪ್ರಕರಣ ಸೇರಿದಂತೆ ಸುಮಾರು 60 ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸರು ಈ ಪ್ರಕರಣದಲ್ಲಿ ಸುಮಾರು 150 ಜನರನ್ನು ಬಂಧಿಸಿದ್ದರು ಮತ್ತು ಅವರಲ್ಲಿ ಕೆಲವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಆದರೆ ಹೆಚ್ಚಿನವರು ಜಾಮೀನಿನ ಮೇಲೆ ಹೊರಗಿದ್ದಾರೆ. ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ತನ್ನ ಉದ್ದೇಶವನ್ನು ಸ್ಪಷ್ಟಪಡಿಸಿತ್ತು ಮತ್ತು ಅಂತಿಮವಾಗಿ ಗುರುವಾರ ಪ್ರಕರಣಗಳನ್ನು ಹಿಂತೆಗೆದುಕೊಂಡಿತು.
ಇದು ಕಾಂಗ್ರೆಸ್ ಪಕ್ಷದ ಓಲೈಕೆ ರಾಜಕಾರಣದ ಪರಮಾವಧಿ ಎಂದು ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಂಪುಟದ ನಿರ್ಧಾರ ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆಯ ಧೋರಣೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇನ್ನೂ ಪ್ರಕರಣದ ತನಿಖೆ ನಡೆಸುತ್ತಿರುವಾಗ, ಸರ್ಕಾರ ಅದನ್ನು ಕೈಬಿಡುವುದು ಸರಿಯಲ್ಲ. “ಘಟನೆಗಳು ಭಯೋತ್ಪಾದನಾ ಕೃತ್ಯಗಳಿಗಿಂತ ಕಡಿಮೆ ಇರಲಿಲ್ಲ. ಪೊಲೀಸರು ಮತ್ತು ನ್ಯಾಯಾಂಗ ಪ್ರಕರಣಗಳನ್ನು ಕೈಬಿಡುವುದನ್ನು ವಿರೋಧಿಸಿದರೆ, ಸರ್ಕಾರ ಅವರ ಅಭಿಪ್ರಾಯಕ್ಕೆ ವಿರುದ್ಧವಾಗಿದೆ ಎಂದು ಅವರು ಆರೋಪಿಸಿದರು.
ಪ್ರಕರಣ ಹಿಂಪಡೆಯುವುದರಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಸಿಯಬಹುದು ಎಂದು ವಿಧಾನಸಭೆಯ ಉಪ ವಿರೋಧ ಪಕ್ಷದ ನಾಯಕ ಅರವಿಂದ್ ಬೆಲ್ಲದ್ ಹೇಳಿದ್ದಾರೆ. ದುಷ್ಟ ಶಕ್ತಿಗಳನ್ನು ಹತ್ತಿಕ್ಕಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ ಇದಕ್ಕೆ ವಿರುದ್ಧವಾಗಿ, ದೇಶ ವಿರೋಧಿ ಮತ್ತು ಸಮಾಜ ವಿರೋಧಿ ಶಕ್ತಿಗಳನ್ನು ಪೋಷಿಸುತ್ತಿದ್ದಾರೆ. ಅದೂ ದಸರಾ ಹಬ್ಬದ ಸಂದರ್ಭದಲ್ಲಿ. ಇಂತಹ ಕ್ರಮವು ದುಷ್ಟ ಶಕ್ತಿಗಳನ್ನು ಪ್ರೋತ್ಸಾಹಿಸುತ್ತದೆ ಎದು ಅವರು ಹೇಳಿದ್ದಾರೆ.
ಮುಖ್ಯಮಂತ್ರಿ ಮುಡಾ ಹಗರಣದಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದಂತೆಯೇ ರಾಜೀನಾಮೆಯ ಕತ್ತಿ ಅವರ ತಲೆಯ ಮೇಲೆ ತೂಗುತ್ತಿದೆ. ಕೇಸ್ ವಾಪಸ್ ಪಡೆಯುವುದು ಮೂಡಾ ಹಗರಣದ ದಿಕ್ಕು ತಪ್ಪಿಸುವ ತಂತ್ರವಾಗಿದೆ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದ್ದಾರೆ.
Advertisement