
ಬೆಂಗಳೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಅಕ್ಟೋಬರ್ 21ರಂದು ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.
ಪರಮೇಶ್ವರ್ ಅವರು ದಲಿತ ಮುಖಂಡರಾಗಿದ್ದು, ಅಕ್ಟೋಬರ್ 21 ರಂದು ವಿಧಾನಸೌಧದಲ್ಲಿ ಎಸ್‌ಸಿ ಸಮುದಾಯದ ಶಾಸಕರ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ, ಆರ್ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ, ವಿಧಾನಸಭೆ ಉಪಸಭಾಪತಿ ರುದ್ರಪ್ಪ ಎಂ.ಲಮಾಣಿ ಸೇರಿದಂತೆ ಇತರರು ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಈಗಾಗಲೇ ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದ ಸಮಿತಿ, ಎಂಎಲ್‌ಸಿ ಸುಧಾಮದಾಸ್ ಸೇರಿದಂತೆ ಸದಸ್ಯರನ್ನೊಳಗೊಂಡ ಸಮಿತಿಯು ಮೀಸಲಾತಿ ವರ್ಗೀಕರಣದ ಕುರಿತು ಹಲವು ಸುತ್ತಿನ ಚರ್ಚೆ ನಡೆಸಿದೆ.
ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಕೈಗೊಂಡಿರುವ ನಿರ್ಧಾರ ವೈಜ್ಞಾನಿಕವಾಗಿಲ್ಲ. ಆಗಿನ ಕಾನೂನು ಸಚಿವ ಜೆ.ಸಿ.ಮಧು ಸ್ವಾಮಿ ನೇತೃತ್ವದ ಉಪಸಮಿತಿ ಸಲ್ಲಿಸಿದ್ದ ವರದಿಯನ್ನು ಆಧರಿಸಿ ಬೊಮ್ಮಾಯಿ ಸರ್ಕಾರ ಮೀಸಲಾತಿ ವರ್ಗೀಕರಣ ಕುರಿತು ನಿರ್ಧಾರ ಕೈಗೊಂಡಿತ್ತು. ಬೊಮ್ಮಾಯಿ ನೇತೃತ್ವದ ಸರ್ಕಾರವು SC ಮೀಸಲಾತಿಯನ್ನು 15 ರಿಂದ ಶೇ.17 ಕ್ಕೆ ಹೆಚ್ಚಿಸಿತ್ತು. ವಿವಿಧ ಸಮುದಾಯಗಳ ನಿಖರವಾದ ಮಾಹಿತಿಯಿಲ್ಲದಿದ್ದರೂ ಪರಿಶಿಷ್ಟ ಜಾತಿ ಜನಸಂಖ್ಯೆ ಹೆಚ್ಚಾಗಿದೆ ಎಂದು ಭಾವಿಸಿ ಮೀಸಲಾತಿಯನ್ನು ಮರುಹಂಚಿಕೆ ಮಾಡಿತ್ತು ಎಂದು ಎಂದು ಸಮಿತಿ ಅಭಿಪ್ರಾಯಪಟ್ಟಿದೆ ಎಂದು ಮೂಲಗಳು ತಿಳಿಸಿವೆ.
ಏತನ್ಮಧ್ಯೆ ಅಕ್ಟೋಬರ್ 18 ರಂದು ನಡೆಯುವ ಸಚಿವ ಸಪುಟ ಸಭೆಯಲ್ಲಿ ಜಾತಿ ಗಣತಿ ಕುರಿತಂತೆಯೂ ಚರ್ಚೆಗಳು ನಡೆಯಲಿದ್ದು, ಸಭೆಯಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಎನ್ನಲಾಗಿದೆ.
ಇನ್ನು ಎಸ್‌ಸಿ ವರ್ಗದ ಎಲ್ಲಾ ನಾಯಕರು ಒಳಮೀಸಲಾತಿಗೆ ಒಪ್ಪಿಗೆ ನೀಡಿದ್ದಾರೆ. ಆದರೆ, ವೈಜ್ಞಾನಿಕ ರೀತಿಯಲ್ಲಿರಬೇಕು ಎಂದು ಒತ್ತಾಯಿಸಿದ್ದಾರೆ. ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಾಸಕರೊಬ್ಬರು ಹೇಳಿದ್ದಾರೆ.
ಈ ನಡುವೆ ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಸರ್ಕಾರವು ಮೀಸಲಾತಿ ವರ್ಗೀಕರಣವನ್ನು ಜಾರಿಗೊಳಿಸಲು ವಿಳಂಬ ನೀತಿ ಅನುಸರಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ಸಮುದಾಯದ ಮುಖಂಡರ ಗುಂಪು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
Advertisement