ಪಂಚಮಸಾಲಿಗೆ 2ಎ ಮೀಸಲಾತಿ: ಕಾನೂನು ಮತ್ತು ಸಂವಿಧಾನದ ಆಶಯದಂತೆ ನಿರ್ಧಾರ; ನಿಯೋಗಕ್ಕೆ ಸಿಎಂ ಸಿದ್ದರಾಮಯ್ಯ ಭರವಸೆ

ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು
ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನಿಯೋಗದೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ
ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನಿಯೋಗದೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ
Updated on

ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಪ್ರವರ್ಗ-2ಎ ಅಡಿ ಮೀಸಲಾತಿ ನೀಡಬೇಕೆಂಬ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ, ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು ಎಂದರು.

ಶಾಶ್ವತ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸ್ಸು ಇನ್ನೂ ನಮ್ಮ ಕೈಗೆ ತಲುಪಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್‌ ಜನರಲ್‌, ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಮೀಸಲಾತಿ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು, ಅದರ ಶಿಫಾರಸ್ಸಿನನ್ವಯ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಪಂಚಮಸಾಲಿ ಸಮುದಾಯದ ಮುಖಂಡರು ಭೇಟಿಯಾದಾಗ ನಾನು ಸಲಹೆ ನೀಡಿದ್ದೆ. ಯಾವುದೇ ತೀರ್ಮಾನ ನ್ಯಾಯಯುತವಾಗಿ ಎಲ್ಲರಿಗೂ ಒಪ್ಪಿತವಾಗುವಂತೆ, ನ್ಯಾಯಾಲಯಕ್ಕೂ ಒಪ್ಪಿಗೆಯಾಗುವಂತಿರಬೇಕು. ಸಂವಿಧಾನದ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು, ಯಾವುದೇ ತೀರ್ಮಾನ ಕೈಗೊಳ್ಳುವುದಿದ್ದರೂ, ಕಾನೂನು ಪ್ರಕಾರ ಪ್ರಾಮಾಣಿಕವಾಗಿ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಹಿಂದಿನ ಸರ್ಕಾರ ಸಮುದಾಯದ ಮನವಿ ಮೇರೆಗೆ 2ಸಿ ಮತ್ತು 2ಡಿ ಹೊಸ ಪ್ರವರ್ಗ ಮಾಡಿತು. 3ಎ ನಲ್ಲಿರುವ ಒಕ್ಕಲಿಗರನ್ನು 2ಸಿ ಗೆ ಸೇರಿಸುವುದು. 3ಬಿಯಲ್ಲಿರುವ ಲಿಂಗಾಯತರನ್ನು 2ಡಿಗೆ ಸೇರಿಸುವ ಪ್ರಸ್ತಾಪ ಮುಂದಿರಿಸಿತು. ಮುಸ್ಲಿಂಮರ ಮೀಸಲಾತಿಯನ್ನು ತೆಗೆದು ಹಾಕಿತ್ತು. ಮುಸ್ಲಿಂಮರು ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದಾಗ, ಯಥಾಸ್ಥಿತಿ ಮುಂದುವರೆಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು. ಆದ್ದರಿಂದ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ಈಗ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ಪೂರ್ವನಿಗದಿಯಂತೆ ಸಮುದಾಯದ ಮುಖಂಡರೊಂದಿಗೆ ಇಂದು ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನಿಯೋಗದೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ
ಮೀಸಲಾತಿಗಾಗಿ ಒತ್ತಾಯಿಸಲು ಪಂಚಮಸಾಲಿ ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿ: ರಾಜು ಕಾಗೆ

ಪಂಚಮಸಾಲಿ ಸಮುದಾಯ ಪ್ರಸ್ತುತ ಪ್ರವರ್ಗ-3 ಬಿ ಯಲ್ಲಿದೆ. ಈ ಪ್ರವರ್ಗದಡಿ ಲಿಂಗಾಯತ ಹಾಗೂ ಅದರ ಉಪಜಾತಿಗಳೇ ಮೀಸಲಾತಿ ಸೌಲಭ್ಯ ಪಡೆಯುತ್ತಿವೆ. ಹಾಗಾಗಿ 2ಎ ಪ್ರವರ್ಗದಡಿ ಪಂಚಮಸಾಲಿಗರನ್ನು ಸೇರಿಸಬೇಕೆಂದು ನಿಯೋಗ ಒತ್ತಾಯಿಸಿದೆ. ಸೂಕ್ತ ಮೀಸಲಾತಿ ಇಲ್ಲದ ಕಾರಣ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೃಷಿ ಕಾರ್ಮಿಕರು ಹೆಚ್ಚಾಗಿರುವ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಸೇರಿಸಿ ಸಾಮಾಜಿಕ ನ್ಯಾಯ ಒದಗಿಸಲು ನಿಯೋಗ ಮನವಿ ಮಾಡಿದೆ.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಶಿವರಾಜ ತಂಗಡಗಿ, ಶಾಸಕರುಗಳಾದ ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್, ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು, ಸಮುದಾಯದ 40ಕ್ಕೂ ಹೆಚ್ಚು ಮುಖಂಡರು, ವಕೀಲರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com