
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಯಾಗುತ್ತಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಥವಾ ಜಾತಿ ಗಣತಿ ವರದಿಯನ್ನು ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನವೇ ಈ ವರ್ಷದ ಫೆಬ್ರವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಲಾಗಿತ್ತು.
ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ವರದಿಯ ಬಗ್ಗೆ ಚರ್ಚಿಸಬೇಕು, ಅದರಲ್ಲಿ ಏನಿದೆ ಎಂಬುದು ಜನರಿಗೆ ತಿಳಿಯಬೇಕಾಗಿದೆ. ಇದಕ್ಕಾಗಿ ಸರ್ಕಾರ 160 ಕೋಟಿ ರೂ. ಖರ್ಚು ಮಾಡಿದೆ. ವರದಿಯಲ್ಲಿ ಏನಿದೆ ಎಂಬುದನ್ನು ಜನರಿಗೆ ಹೇಳಬೇಕು, ಇಲ್ಲದಿದ್ದರೆ ಸರ್ಕಾರ ಅದನ್ನು ಮರೆ ಮಾಚಲು ಪ್ರಯತ್ನಿಸುತ್ತಿದೆ ಎಂದು ಭಾವಿಸುತ್ತಾರೆ ಎಂದರು.
ಒಳ ಮೀಸಲಾತಿ ಮತ್ತು ಜಾತಿ ಗಣತಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನು ನಿಭಾಯಿಸಲು ಸಮರ್ಥರಾಗಿದ್ದಾರೆ. ಆದರೆ, ಮೀಸಲಾತಿ ಪ್ರಮಾಣ ಶೇ. 50 ಮೀರಬಾರದು. ರಾಜ್ಯದಲ್ಲಿ ಅನೇಕ ಸಮುದಾಯಗಳು ಮೀಸಲಾತಿ ಕೇಳುತ್ತಿದ್ದು, ಒಂದು ವೇಳೆ ಅವರನ್ನು ಮೀಸಲಾತಿ ವ್ಯಾಪ್ತಿಗೆ ತಂದರೆ ಅದು ಶೇ. 50 ನ್ನು ಮೀರಲಿದೆ ಎಂದು ಪರಮೇಶ್ವರ್ ತಿಳಿಸಿದರು.
Advertisement