ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ!
ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದೆ. ಅಲ್ಲದೇ ಎಲ್ಲಾ ಅಪರಾಧಿಗಳನ್ನು ಕೂಡಲೇ ವಶಕ್ಕೆ ಪಡೆದುಕೊಳ್ಳುವಂತೆ ಆದೇಶಿಸಿರುವ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲೇ ಸಿಬಿಐ ಅಧಿಕಾರಿಗಳು ಸೈಲ್ ರನ್ನು ವಶಕ್ಕೆ ಪಡೆದಿದ್ದಾರೆ.
ಮುಟ್ಟುಗೋಲು ಹಾಕಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಹಾಗೂ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದು ಶಿಕ್ಷೆ ಪ್ರಮಾಣವನ್ನು ನಾಳೆ (ಅಕ್ಟೋಬರ್ 25) ಕಾಯ್ದಿರಿಸಿದ್ದಾರೆ.
ಒಟ್ಟು 6 ಪ್ರಕರಣಗಳಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಅಂತಿಮ ಆದೇಶ ಹೊರಡಿಸಿದೆ. ಬೇಲೇಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದಂತೆ ದಾಖಲಾದ 6 ಪ್ರಕರಣಗಳ ಸಂಬಂಧ ತನಿಖೆ ನಡೆಸಿದ್ದ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿತ್ತು. ಇದೀಗ ಕೋರ್ಟ್ ಆವರಣದಲ್ಲೇ ಆರೋಪಿಗಳನ್ನು ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿಗಳು ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಿದ್ದಾರೆ.