
ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆರು ಮಂದಿ ಸಿಬ್ಬಂದಿಗೆ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
6 ಮಂದಿಗೂ ಒಂದೇ ದಿನ ಅಲ್ಲದೆ, ಬೇರೆ ಬೇರೆ ದಿನಾಂಕಗಳನ್ನು ನೀಡಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಬೆಂಗಳೂರಿನ ಇಡಿ ವಲಯ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ ಎಂದು ತಿಳಿದುಬಂದಿದೆ.
ಸಮನ್ಸ್ ಪಡೆದ 6 ಮಂದಿ ನೌಕರರು ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ತಮ್ಮೊಂದಿಗೆ ತರುವಂತೆ ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಕಳೆದ ತಿಂಗಳು ಜಾರಿ ನಿರ್ದೇಶನಾಲಯ (ಇಡಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿಕೊಂಡಿತ್ತು. ಇದರ ಬೆನ್ನಲ್ಲೇ ಅಧಿಕಾರಿಗಳಿಗೆ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದ್ದು, ಎರೆಡೆರೆಡು ಸಂಸ್ಥೆಗಳಿಂದ ತನಿಖೆ ಚುರುಕುಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಮಾಡಿದ್ದ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಲಯವು (ಇ.ಡಿ), ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಚೇರಿ ಮತ್ತು ಮೈಸೂರು ತಾಲ್ಲೂಕು ಕಚೇರಿಯಲ್ಲಿ ಈಚೆಗೆ ಶೋಧ ಕಾರ್ಯ ನಡೆಸಿತ್ತು.
ಪಾರ್ವತಿ ಅವರ ಸೋದರ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ಜಮೀನು ಮಾರಾಟ ಮಾಡಿದ್ದ ದೇವರಾಜು ಅವರ ಕೆಂಗೇರಿ ನಿವಾಸದಲ್ಲೂ ಇ.ಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.
ವಿಚಾರಣೆ ಪೂರ್ಣಗೊಳಿಸಿದ್ದ ಇ.ಡಿ ಅಧಿಕಾರಿಗಳು ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿತ್ತು
Advertisement