
ಬೆಂಗಳೂರು: ಮಳೆ ಅವಾಂತರ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ನಗರದಲ್ಲಿ ಅಕ್ರಮ ಕಟ್ಟಡಗಳ ತಡೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಬಿಎಂಆರ್‌ಡಿಎ)ಕ್ಕೆ ಹೆಚ್ಚಿನ ಅಧಿಕಾರ ನೀಡಲು ಮುಂದಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಉಂಟಾಗಿರುವ ಅತಿವೃಷ್ಟಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಬಿಬಿಎಂಪಿ ಆಯುಕ್ತರೊಂದಿಗೆ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸಭೆ ನಡೆಸಿದರು.
ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಹಾಗೂ ಡಿಸಿಎಂ, ಅನಧಿಕೃತ ಕಟ್ಟಡಗಳಿಂದ ಆಗುವ ಅನಾಹುತಗಳನ್ನು ತಡೆಯಲು ಬಿಬಿಎಂಪಿ, ಬಿಡಿಎ ಹಾಗೂ ಬಿಎಂಆರ್‌ಡಿಎಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಬೆಂಗಳೂರಿನಲ್ಲಿ ಅನಧಿಕೃತ ಹಾಗೂ ಗುಣಮಟ್ಟವಿಲ್ಲದ ಕಟ್ಟಡಗಳನ್ನು ಕೆಡವುವ ಕಾರ್ಯಾಚರಣೆ ಮುಂದುವರಿದಿದೆ. ಹಿಂದಿನ ಸರ್ಕಾರ ಅನಧಿಕೃತ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳ ಅಧಿಕಾರವನ್ನು ಮೊಟಕುಗೊಳಿಸಿತ್ತು. ಆದರೆ, ನಮ್ಮ ಸರ್ಕಾರ ಬಿಬಿಎಂಪಿ, ಬಿಡಿಎ ಮತ್ತು ಬಿಎಂಆರ್‌ಡಿಎಗೆ ಹೆಚ್ಚಿನ ಅಧಿಕಾರ ನೀಡಲು ನಿರ್ಧರಿಸಿದೆ, ಜೊತೆಗೆ ಅನಧಿಕೃತ ಆಸ್ತಿಗಳ ನೋಂದಣಿಯನ್ನೂ ಸ್ಥಗಿತಗೊಳಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ ಬೆಂಗಳೂರಿನಲ್ಲಿರುವ ಮಳೆನೀರು ಚರಂಡಿಗಳ ಒತ್ತುವರಿಯನ್ನು ಆದ್ಯತೆ ಮೇರೆಗೆ ತೆರವುಗೊಳಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.
ಕಳೆದ ಬಾರಿ ಸಿಎಂ ಆಗಿದ್ದ ಅವಧಿಯಲ್ಲಿ ಅತಿಕ್ರಮಣ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೆ. ಆದರೆ, ಅದನ್ನು ನಡೆಸಿಲ್ಲ, ಹೀಗಾಗಿ ನಗರದಲ್ಲಿ ಭಾರಿ ಮಳೆ ಬಂದಾಗಲೆಲ್ಲ ಅನಾಹುತಗಳು ಸಂಭವಿಸುತ್ತಿವೆ. ಅಕ್ಟೋಬರ್‌ನಲ್ಲಿ ಬೆಂಗಳೂರಿನಲ್ಲಿ 275 ಮಿಮೀ ಮಳೆಯಾಗಿದ್ದು, ಇದು ಶತಮಾನದಲ್ಲೇ ಮೂರನೇ ಅತಿ ಹೆಚ್ಚು ಮಳೆಯಾಗಿದೆ,
ವಿಶ್ವಬ್ಯಾಂಕ್ ಸಂಸ್ಥೆಯು ಬೆಂಗಳೂರು ನಗರದಲ್ಲಿ ಬಾಕಿ ಉಳಿದಿರುವ 173 ಕಿಮೀ ಉದ್ದದ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಿಸುವ ಯೋಜನೆಗೆ ಹಾಗೂ 80 ಕಿಮೀ ಉದ್ದದ ಕಲ್ಲುಕಟ್ಟಡದ ರಾಜಕಾಲುವೆಗಳ ಸಬಲೀಕರಣ ಯೋಜನೆಗೆ ರೂ.2ಸಾವಿರ ಕೋಟಿ ಆರ್ಥಿಕ ನೆರವು ನೀಡಲು ತಾತ್ವಿಕ ಒಪ್ಪಿಗೆ ನೀಡಿದೆ. ಬೆಂಗಳೂರಿಗೆ ಭೇಟಿ ನೀಡಿದ ವಿಶ್ವಬ್ಯಾಂಕ್ ಅಧಿಕಾರಿಗಳೊಂದಿಗೆ ನಾವು ಚರ್ಚೆ ನಡೆಸಿದ್ದೇವೆ. ಅವರು 5000 ಕೋಟಿ ರೂಪಾಯಿ ನೀಡಲು ಒಪ್ಪಿಗೆ ನೀಡಿದ್ದಾರೆ. ಅದರಲ್ಲಿ 3500 ಕೋಟಿ ರೂಪಾಯಿಗಳನ್ನು ಬೆಂಗಳೂರಿಗೆ ಖರ್ಚು ಮಾಡಲಾಗುವುದು. ಯೋಜನೆಯ ಅಂದಾಜನ್ನು ಸಚಿವ ಸಂಪುಟದ ಮುಂದಿಟ್ಟು, ಒಪ್ಪಿಗೆ ಪಡೆಯಲಾಗುವುದು. ಬಳಿಕ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುವುದು, ಎಂದು ಹೇಳಿದರು. ಇದೇ ವೇಳೆ ನಗರದಲ್ಲಿ ರಸ್ತೆ ಸುಧಾರಣೆಗೂ 669 ಕೋಟಿ ರೂ.ಗಳ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದರು.
ಬಳಿಕ ಪ್ರವಾಹ ಪರಿಹಾರ ಕಾಮಗಾರಿಗಳ ಬಗ್ಗೆ ವಿರೋಧ ಪಕ್ಷದ ನಾಯಕರ ಟೀಕೆಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ನಗರದಲ್ಲಿ ಇಬ್ಬರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ, ಆದರೆ, ಕಳಪೆ ಗುಣಮಟ್ಟದ ನಿರ್ಮಾಣ, ಮಳೆಯಿಂದ ಯಾವುದೇ ಸಾವು ಸಂಭವಿಸಿಲ್ಲ. ಪ್ರವಾಹ ಪೀಡಿತ ನಿವಾಸಿಗಳಿಗೆ ಹೋಟೆಲ್‌ಗಳಲ್ಲಿ ವಸತಿ ಕಲ್ಪಿಸಲಾಗಿದೆ ಎಂದು ತಿಳಿಸಿದರು
Advertisement