
ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಹಗರಣದಲ್ಲಿ ಇಡಿ ಅಧಿಕಾರಿಗಳು ಈಗಾಗಲೇ ಹಲವರಿಗೆ ನೋಟಿಸ್ ನೀಡಿ ಮಹತ್ವದ ಮಾಹಿತಿ ಕಲೆ ಹಾಕುತ್ತಿದೆ. ಇದರ ನಡುವೆ, ಇಡಿ ಅಧಿಕಾರಿಗಳು ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಬಿಲ್ಡರ್ ಎನ್. ಮಂಜುನಾಥ್ ಮನೆ ಮೇಲೆ ಇಂದು ದಾಳಿ ಮಾಡಿದೆ. ಸೆಟಲ್ಮೆಂಟ್ ಡೀಡ್ ಹೆಸರಿನಲ್ಲಿ ಹಣ ಪಡೆದ ಆರೋಪದಡಿ ಬಿಲ್ಡರ್ ಮಂಜುನಾಥ್ ವಿರುದ್ಧ ದೂರು ನೀಡಲಾಗಿತ್ತು. ಮೈಸೂರಿನ ಶಿವಣ್ಣ ಎಂಬುವರಿಂದ ಬಿಲ್ಡರ್ ಮಂಜುನಾಥ್ ಅವರ ಸಹಾಯಕ 25 ಲಕ್ಷ ರೂ. ಹಣ ಪಡೆದು ಎಣಿಸುತ್ತಿರುವ ವಿಡಿಯೋ ಸಮೇತ ಇಡಿಗೆ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳು ಮುಡಾ ಮಾಜಿ ಆಯುಕ್ತರಾದ ಡಿಬಿ ನಟೇಶ್ ಮತ್ತು ದಿನೇಶ್ ಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟಾ ಬೆಂಬಲಿಗ ರಾಕೇಶ್ ಪಾಪಣ್ಣ ಮನೆ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ವಿಜಯಪುರದ ರೈತರಿಗೆ ವಕ್ಫ್ ಬೋರ್ಡ್ ನೀಡಿರುವ ನೋಟಿಸ್ ಅನ್ನು ವಾಪಸ್ ಪಡೆಯುವಂತೆ ಸೂಚಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ರೈತರ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಗುರುತಿಸಲಾಗಿದೆ ಎಂಬ ಆರೋಪಗಳು ಕೇಳಿಬಂದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೆ ಆಗಿರುವ ತಪ್ಪಿನ ಬಗ್ಗೆ ವಿಚಾರಿಸುವುದಾಗಿ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಜಮೀನು ಕಬಳಿಕೆ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಬಿಜೆಪಿಯವರು ಅನಾವಶ್ಯಕವಾಗಿ ರಾಜಕೀಯ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಮಾಡೋದು ಸೂಕ್ತ ಅಲ್ಲ. ರೈತರಿಗೆ ನೋಟಿಸ್ ಹೋಗಿದ್ದರೆ ಅದನ್ನು ವಾಪಸ್ ಪಡೆಯುತ್ತೇವೆ ಎಂದು ಎಂ.ಬಿ ಪಾಟೀಲ್ ಈಗಾಗಲೇ ಹೇಳಿದ್ದಾರೆ ಎಂದರು.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಮಾತನಾಡಿದ ಹೆಚ್.ಕೆ ಪಾಟೀಲ್, 30 ವಿಷಯಗಳನ್ನು ನಾವು ಚರ್ಚಿಸಿದ್ದೇವೆ. ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದಲ್ಲಿ ರಾಜ್ಯ ಸರ್ಕಾರದ ಈಕ್ವಿಟಿ ಷೇರುಗಳ ಪ್ರಮಾಣವನ್ನು ಶೇ.49% ರಿಂದ 90ಕ್ಕೆ ಹೆಚ್ಚಿಸಲು ಸಂಪುಟ ಒಪ್ಪಿಗೆ ನೀಡಿದೆ. ಶಿವಮೊಗ್ಗದ ಸೋಗಾನೆ ಗ್ರಾಮದಲ್ಲಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣದ ಅಭಿವೃದ್ಧಿಗೆ ಅನುಮೋದನೆ. ದೇವನಹಳ್ಳಿ-ವಿಜಯಪುರ-ಹೆಚ್.ಕ್ರಾಸ್-ಮಾಲೂರು ಗಡಿವರೆಗೆ ಹೈಬ್ರಿಡ್ ಮಾದರಿಯಲ್ಲಿ 110 ಕಿಲೋ ಮೀಟರ್ ಉದ್ದದ ರಸ್ತೆ ಅಭಿವೃದ್ಧಿಗೆ ಅನುಮೋದನೆ ನೀಡಲಾಗಿದೆ ಎಂದರು.
ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಕೊನೆಗೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೀರ್ಮಾನಿಸಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿ(ಎಸ್ಸಿ) ಒಳ ಮೀಸಲಾತಿ ಕಲ್ಪಿಸಲು ನಿರ್ಣಯಿಸಲಾಗಿದ್ದು, ನಿವೃತ್ತ ಹೈ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸ್ವೀಕರಿಸಿ ಮುಂದಿನ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದೆ. ಅಲ್ಲದೇ ಮೂರು ತಿಂಗಳಲ್ಲಿ ವರದಿ ಸಲ್ಲಿಕೆ ಮಾಡಲು ಆಯೋಗಕ್ಕೆ ಸೂಚನೆ ನೀಡಲಾಗಿದೆ. ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ನೀಡಲು ಸುಪ್ರಿಂ ಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಚರ್ಚೆ ನಡೆದಿದ್ದು, ಒಳ ಮೀಸಲಾತಿ ಕಲ್ಪಿಸಲು ಕ್ಯಾಬಿನೆಟ್ ನಿರ್ಣಯ ಮಾಡಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 29ಕ್ಕೆ ಮುಂದೂಡಿದೆ. ಇತ್ತೀಚಿಗೆ ಸೆಷನ್ಸ್ ಕೋರ್ಟ್ ನಟ ದರ್ಶನ್ ಅವರಿಗೆ ಜಾಮೀನು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ಅನಾರೋಗ್ಯ ಕಾರಣ ನೀಡಿ ಹೈಕೋರ್ಟ್‌ಗೆ ತುರ್ತು ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರು, ಆರೋಪಿ ದರ್ಶನ್ ಅವರ ಆರೋಗ್ಯದ ಬಗ್ಗೆ ಬಳ್ಳಾರಿ ಜೈಲು ಅಧಿಕಾರಿಗಳು ಸಲ್ಲಿಸಿದ ವರದಿಯನ್ನು ಪರಿಶೀಲಿಸಿದ್ದು, ವಿಚಾರಣೆಯನ್ನು ನಾಳೆಗೆ ಮುಂದೂಡಿದರು.