ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ತೂಗುದೀಪ ಅವರಿಗೆ ಹೈಕೋರ್ಟ್ ಬುಧವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ನೊಂದ ಕುಟುಂಬ, ನ್ಯಾಯಾಂಗ ಮತ್ತು ಪೊಲೀಸರ ಮೇಲೆ ನಮಗೆ ನಂಬಿಕೆ ಇದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್‌ಗೆ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಲು ನ್ಯಾಯಾಲಯವು ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
"ಕಾನೂನು ವ್ಯವಸ್ಥೆಯಲ್ಲಿ ಜಾಮೀನು ನೀಡಲಾಗಿದೆ. ಅದರ ಬಗ್ಗೆ ನಾವು ಪ್ರತಿಕ್ರಿಯಿಸುವುದಿಲ್ಲ. ಆದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂಬ ನಂಬಿಕೆ ನಮಗಿದೆ. ನಮಗೆ ಕಾನೂನು ಮತ್ತು ಪೊಲೀಸರ ಮೇಲೆ ನಂಬಿಕೆ ಇದೆ. ದರ್ಶನ್ ಗೆ ಜಾಮೀನು ವೈದ್ಯರು ಮತ್ತು ನ್ಯಾಯಾಲಯದ ವಿಷಯವಾಗಿದೆ. ಈ ಬಗ್ಗೆ ನಾವು ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದು ರೇಣುಕಾಸ್ವಾಮಿ ಅವರ ತಂದೆ ಕಾಶಿನಾಥ ಶಿವನಗೌಡರ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎನ್ನುವುದನ್ನು ಬಿಟ್ಟು ಬೇರೆ ಏನನ್ನೂ ಹೇಳುವುದಿಲ್ಲ. ನಮಗೆ ಕಾನೂನು ಮತ್ತು ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಹಾಗಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.
ರೇಣುಕಾಸ್ವಾಮಿ ಅವರ ಪತ್ನಿ ಸಹನಾ ಅವರು ಅಕ್ಟೋಬರ್ 16 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು, ಪತಿ ಕೊಲೆಯಾದಾಗ ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಕಳೆದ ಜೂನ್ 11 ರಂದು ದರ್ಶನ್ ಬಂಧನವಾಗಿದ್ದು, ಬಳ್ಳಾರಿ ಜೈಲು ಸೇರಿದ್ದಾರೆ. ಪ್ರಕರಣದಲ್ಲಿ ಆತನ ಸ್ನೇಹಿತೆ ಪವಿತ್ರಾ ಗೌಡ ಸೇರಿ 15 ಮಂದಿ ಸಹ ಆರೋಪಿಗಳಾಗಿದ್ದಾರೆ. ಪವಿತ್ರಾ ಬೆಂಗಳೂರಿನ ಜೈಲಿನಲ್ಲಿ ಮತ್ತು ಇತರರು ರಾಜ್ಯದ ವಿವಿಧ ಜೈಲುಗಳಲ್ಲಿದ್ದಾರೆ. ಅವರಲ್ಲಿ ಕೆಲವರು ಇತ್ತೀಚೆಗೆ ಜಾಮೀನು ಪಡೆದಿದ್ದಾರೆ.
ಬಳ್ಳಾರಿಯಲ್ಲಿ 63 ದಿನಗಳನ್ನು ಕಳೆದ ದರ್ಶನ್‌ಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಚಿಕಿತ್ಸೆಗಾಗಿ ದರ್ಶನ್ ಪರ ವಕೀಲರು ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿತ್ತು. ಕೊನೆಗೆ ವೈದ್ಯರ ವರದಿ ಆಧರಿಸಿ ಹೈಕೋರ್ಟ್ ಮಧ್ಯಂತರ ಜಾಮೀನಿ ನೀಡಿದೆ.
Advertisement