
ಬೆಂಗಳೂರು: ವಕ್ಫ್ ಭೂಮಿ ವಿಚಾರವಾಗಿ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ನವೆಂಬರ್ 4ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ.
ಪ್ರತಿಭಟನೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಸಂಸದರು, ಶಾಸಕರು, ಪರಿಷತ್ ಸದಸ್ಯರು, ಮಾಜಿ ಲೋಕಸಭಾ ಸದಸ್ಯರು, ಪಕ್ಷದ ಪದಾಧಿಕಾರಿಗಳು ಪತ್ರ ಬರೆದಿದ್ದು, ಜಮೀನು ಕಳೆದುಕೊಳ್ಳುವ ಭೀತಿಯಲ್ಲಿರುವ ರೈತರನ್ನು ಬೆಂಬಲಿಸಿ ಪ್ರತಿಭಟನೆ ನಡೆಸಲಾಗುತ್ತಿದ್ದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.
ಈ ಪ್ರತಿಭಟನೆಯಲ್ಲಿ ಸಂಸದರು, ಶಾಸಕರು, ಪರಿಷತ್ ಸದಸ್ಯರು, ಮಾಜಿ ಲೋಕಸಭಾ ಸದಸ್ಯರು, ಪಕ್ಷದ ಪದಾಧಿಕಾರಿಗಳು ಪಾಲ್ಗೊಳ್ಳಬೇಕು. ರಾಜ್ಯದಲ್ಲಿ ಅಸ್ತಿತ್ವದ ಸರಕಾರವು ರಾಜ್ಯದಲ್ಲಿ ತುಘಲಕ್ ನೀತಿಯನ್ನು ಜಾರಿಗೆ ತರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡವಲೇ ಸಚಿವ ಜಮೀಪ್ ಅಹಮದ್‍ರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲದಿದ್ದರೆ ರೈತರ ಪರವಾಗಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ, ತಹಸಿಲ್ದಾರ್ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು. ಅಮಾಯಕ ರೈತರ ಪಹಣಿ ಪತ್ರಗಳಲ್ಲಿ ವಕ್ಫ್ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಿಸುವುದರ ಮೂಲಕ ರೈತರ ಜಮೀನನ್ನು ಕಬಳಿಸುವ ಹುನ್ನಾರ ನಡೆದಿದೆ.
ಈಗಾಗಲೇ ಸಾವಿರಾರು ರೈತರ ಪಹಣಿಗಳಲ್ಲಿ ವಕ್ಫ್ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಿಸಿದ್ದರಿಂದ ಕಲಬುರ್ಗಿ, ವಿಜಯಪುರ, ಯಾದಗಿರಿ, ಬೀದರ್, ಶಿವಮೊಗ್ಗ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ರೈತರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ರಚನಾತ್ಮಕ ಪ್ರತಿಪಕ್ಷವಾಗಿ ನಾವುಗಳು ರೈತರ ಪರವಾಗಿ ನಿಂತು ಸರಕಾರವನ್ನು ಎಚ್ಚರಿಸುವ ಹೋರಾಟಕ್ಕೆ ಇಳಿಯಬೇಕು ಎಂದು ತಿಳಿಸಿದರು.
Advertisement