
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಿಂದ ಗಮನ ಬೇರೆಡೆ ಸೆಳೆಸಲು ಕಾಂಗ್ರೆಸ್ ಸರ್ಕಾರ ವಕ್ಫ್ ವಿವಾದ ಸೃಷ್ಟಿಸಿದೆ ಎಂದು ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್. ಡಿ.ಕುಮಾರಸ್ವಾಮಿ ಗುರುವಾರ ಹೇಳಿದ್ದಾರೆ.
ಚನ್ನಪಟ್ಟಣ ಉಪ ಚುನಾವಣಾ ಪ್ರಚಾರದ ವೇಳೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಪಕ್ಷಗಳನ್ನು ಟೀಕಿಸಿದ್ದರು. ವಕ್ಫ್ ಮಂಡಳಿ ವಿವಾದ ಹೇಗೆ ಬಂತು? ಅದು ಹೇಗೆ ಆರಂಭವಾಯಿತು ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಾಯಕರು ಅಕ್ರಮಗಳಲ್ಲಿ ತೊಡಗಿದ್ದಾರೆ. ವಿಶೇಷವಾಗಿ ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಿಂದ ಗಮನ ಬೇರೆಡೆ ಸೆಳೆಯಲು ವಕ್ಫ್ ವಿವಾದ ಸೃಷ್ಟಿಸಲಾಗಿದೆ ಎಂದು ವಾಗ್ದಾಳಿ ನಡೆಸಿದರು.
ಭ್ರಷ್ಟಾಚಾರ ಪ್ರಕರಣಗಳನ್ನು ಮುಚ್ಚಿಹಾಕಲು ಒಂದಾದ ನಂತರ ಮತ್ತೊಂದು ವಿವಾದವನ್ನು ಹುಟ್ಟುಹಾಕುತ್ತಿದ್ದಾರೆ. ಅದು ಎಲ್ಲಿ ಆರಂಭವಾಯಿತು? ಎಲ್ಲಾದಕ್ಕೂ ಸಮಯ ನೀಡ್ತಿರೋದು ಯಾರು? ಪ್ರತಿಪಕ್ಷಗಳಿಂದ ವಕ್ಪ್ ವಿವಾದ ಸೃಷ್ಟಿಯಾಗಿಲ್ಲ. ಅದನ್ನು ಪ್ರಾರಂಭಿಸಿದ್ದು ಕಾಂಗ್ರೆಸ್ ಸರ್ಕಾರ ಎಂದರು. ಈ ಬಗ್ಗೆ ಕಾಂಗ್ರೆಸ್ ನಾಯಕರು ತಪ್ಪು ಮಾಡಿ, ಪ್ರತಿಪಕ್ಷಗಳ ಮೇಲೆ ಆರೋಪ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ನಾನು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಲು ಬಯಸುತ್ತೇನೆ ಎಂದು ಅವರು ಹೇಳಿದರು.
ಈ ಮಧ್ಯೆ ರೈತರ ಜಮೀನಿಗೆ ವಕ್ಫ್ ಮಂಡಳಿಯಿಂದ ನೋಟಿಸ್ ನೀಡಿಕೆ ವಿಚಾರವಾಗಿ ನವೆಂಬರ್ 4 ರಿಂದ ರಾಜ್ಯಾದ್ಯಂತ ಆಂದೋಲನ ನಡೆಸುವುದಾಗಿ ಬಿಜೆಪಿ ಘೋಷಿಸಿದೆ. ರೈತರ ಭೂ ದಾಖಲೆಗಳನ್ನು ಬದಲಾಯಿಸಲು ಮತ್ತು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಕ್ಫ್ ಮಂಡಳಿಯ ಆಸ್ತಿ ಎಂದು ನಮೂದಿಸಲು ಅಧಿಕಾರಿಗಳಿಗೆ ಕಾಂಗ್ರೆಸ್ ಸರ್ಕಾರ ಒತ್ತಾಯಿಸುತ್ತಿರುವುದನ್ನು ಪಕ್ಷವು "ಬಹಿರಂಗಪಡಿಸುತ್ತದೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
Advertisement