ಬೆಂಗಳೂರು: ರಾಜ್ಯದ ಸಹಕಾರಿ ಸಕ್ಕರೆ ಕಾರ್ಖಾನೆಗಳಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಚಿವ ಶಿವಾನಂದ ಪಾಟೀಲ್ ಅವರು, ನಂದಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಈಗಾಗಲೇ ತನಿಖೆಗೆ ಆದೇಶಿಸಿಲಾಗಿದೆ. ತನಿಖೆ ಮುಂದುವರಿದಿದ್ದು, ವರದಿ ಆಧರಿಸಿ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬಾಗಲಕೋಟೆಯ ಮುಧೋಳ ತಾಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ವರದಿಯಾಗಿರುವ ಹಿನ್ನೆಲೆಯಲ್ಲಿ, ಕಾರ್ಖಾನೆಯನ್ನು ಖಾಸಗಿ ಸಂಸ್ಥೆಗಳಿಗೆ ಗುತ್ತಿಗೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು.
ಈ ನಿರ್ಧಾರ ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡುತ್ತದೆ ಮತ್ತು ರೈತರು ತಮ್ಮ ಕಬ್ಬನ್ನು ಮಾರಾಟ ಮಾಡಲು ಸಹಾಯವಾಗಲಿದೆ ಎಂದರು.
ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ಕುರಿತು ಮಾತನಾಡಿ, ಸರ್ಕಾರ ಈ ಕಾರ್ಖಾನೆ ಕಾರ್ಯನಿರ್ವಹಣೆಯಲ್ಲಿನ ಎಲ್ಲಾ ಅಡೆತಡೆಗಳನ್ನು ನಿವಾರಿಸಿದೆ. ಕಾರ್ಖಾನೆ ಪುನರಾರಂಭಗೊಂಡಿದ್ದು ಈ ವರ್ಷ ಲಾಭ ಗಳಿಸುವ ವಿಶ್ವಾಸವಿದೆ ಎಂದು ಹೇಳಿದರು.
Advertisement