
ಕಲಬುರಗಿ: ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭಾನುವಾರ ದಿನವಿಡೀ ಜೋರು ಮಳೆ ಸುರಿಯಿತು. ನದಿ– ಹಳ್ಳಗಳು ಉಕ್ಕಿ ಹರಿದಿದ್ದು, ಹಲವು ಹಳ್ಳಿಗಳ ಸಂಪರ್ಕ ಕಡಿತ ಗೊಂಡಿದೆ. ತಗ್ಗು ಪ್ರದೇಶದ ಜಮೀನು ಹಾಗೂ ಮನೆಗಳಿಗೆ ನೀರು ನುಗ್ಗಿದೆ.ಅದರಲ್ಲೂ ಕಲಬುರಗಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಶಾಲಾ -ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆಯೂ ಸಾಧಾರಣ ಮಳೆ ಮುಂದುವರಿದಿದೆ. ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು ಮಲಪ್ರಭಾ ನದಿ ಮೈದುಂಬಿ ಹರಿಯುತ್ತಿದೆ. ಕಾಗಿಣಾ ನದಿ ಪ್ರವಾಹದಿಂದಾಗಿ ಸೇಡಂ ತಾಲ್ಲೂಕಿನ ಮಳಖೇಡದ ಹಳೆಯ ಸೇತುವೆ ಮುಳುಗಡೆಯಾಗಿದೆ. ರಾಜ್ಯ ಹೆದ್ದಾರಿ 10ರ ಕಲಬುರಗಿ–ರಿಬ್ಬನಪಲ್ಲಿ, ಸೇಡಂ–ಬಟಗೇರಾ, ಮಳಖೇಡ–ಸಂಗಾವಿ (ಎಂ), ಚಿತ್ತಾಪುರ–ದಂಡೋತಿ, ಚಿಂಚೋಳಿಯ ಭೂತಪೂರ– ಚಿಂತಪಳ್ಳಿ, ತಾಜಲಾಪುರ ಸೇತುವೆಗಳು ಸಹ ಮುಳುಗಡೆಯಾಗಿದ್ದು, ಸಂಚಾರ ಸಂಪೂರ್ಣ ಬಂದ್ ಆಗಿದೆ.
ಕಾಳಗಿಯ ಐತಿಹಾಸಿಕ ನೀಲಕಂಠ ಕಾಳೇಶ್ವರ ದೇವಸ್ಥಾನ, ಮಳಖೇಡ ಉತ್ತರಾದಿ ಮಠದ ಜಯತೀರ್ಥರ ಮೂಲ ವೃಂದಾವನ, ಸಂಗಮೇಶ್ವರ ದೇವಾಲಯ ಜಲಾವೃತವಾಗಿವೆ. ಕಲಬುರಗಿ ತಾಲ್ಲೂಕಿನ ಬೆಣ್ಣೆತೊರಾ, ಚಿಂಚೋಳಿ ತಾಲ್ಲೂಕಿನ ಚಂದ್ರಂಪಳ್ಳಿ ಮತ್ತು ನಾಗರಾಳ ಜಲಾಶಯಗಳು ಭರ್ತಿಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅಪಾರ ಪ್ರಮಾಣ ನೀರು ನದಿಗೆ ಹರಿಸಲಾಗುತ್ತಿದೆ. ಸೆಪ್ಟೆಂಬರ್ 4ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಸಮುದ್ರತೀರದಲ್ಲಿ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಈ ವೇಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
Advertisement