ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳುವ ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ) ಸೆಪ್ಟೆಂಬರ್ 5 ರಿಂದ 10 ರ ವರೆಗೆ ಹೆಚ್ಚುವರಿ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಿದೆ.
ಸೆಪ್ಟೆಂಬರ್ 5 ರಿಂದ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಹೆಚ್ಚುವರಿಯಾಗಿ 1,500 ಬಸ್‌ಗಳನ್ನು ಓಡಿಸಲಾಗುವುದು ಎಂದು ಕೆಎಸ್ ಆರ್ ಟಿಸಿ ಸೋಮವಾರ ತಿಳಿಸಿದೆ.
ಸೆಪ್ಟೆಂಬರ್ 6ರಂದು ಶುಕ್ರವಾರ ಗೌರಿ ಹಬ್ಬ, 7ರಂದು ಶನಿವಾರ ಗಣೇಶ ಚತುರ್ಥಿ ಹಾಗೂ 8ರಂದು ಭಾನುವಾರ ಸಾರ್ವಜನಿಕ ರಜೆ ಇರುತ್ತದೆ. ಹಬ್ಬದ ಆಚರಣೆಗಾಗಿ ಬೆಂಗಳೂರು, ಮಂಗಳೂರು, ಪುಣೆ, ಮುಂಬೈ, ಗೋವಾ ಮತ್ತಿತರ ಪ್ರಮುಖ ಊರುಗಳಲ್ಲಿ ನೆಲೆಸಿರುವ ಹಲವರು ಹಬ್ಬದ ಆಚರಣೆಗಾಗಿ ಸ್ವಂತ ಊರುಗಳಿಗೆ ಆಗಮಿಸಲಿದ್ದಾರೆ. ಅವರ ಅನುಕೂಲಕ್ಕಾಗಿ ಸಪ್ಟೆಂಬರ್ 5 ರಿಂದ 10ರವರೆಗೆ ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಅದಕ್ಕಾಗಿ ವೋಲ್ವೋ ಎಸಿ ಐರಾವತ, ಎಸಿ ಸ್ಲೀಪರ್, ನಾನ್ ಎಸಿ ಸ್ಲೀಪರ್, ರಾಜಹಂಸ ಹಾಗೂ ವೇಗಧೂತ ಸಾರಿಗೆಗಳು ಸೇರಿದಂತೆ ವಿವಿಧ ಮಾದರಿಯ ಬಸ್‌ಗಳನ್ನು ನಿಯೋಜಿಸಲಾಗಿದೆ.
ಕೆಎಸ್‌ಆರ್‌ಟಿಸಿ ಪ್ರಕಾರ, ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ರಾಯಚೂರು, ಕಲಬುರಗಿ, ಕಲಬುರಗಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮತ್ತು ಇತರ ಸ್ಥಳಗಳಿಗೆ ಹೆಚ್ಚುವರಿ ಬಸ್ ಗಳು ಸಂಚರಿಸಲಿವೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳು ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಕಡೆಗೆ ಪ್ರತ್ಯೇಕವಾಗಿ ಕಾರ್ಯನಿರ್ವಹಿಸಲಿವೆ.
ಬಿಎಂಟಿಸಿ ಬಸ್ ನಿಲ್ದಾಣ, ಶಾಂತಿನಗರ (ಟಿಟಿಎಂಸಿ)ದಿಂದ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಖೋಝಿಕೋಡ್ ಮತ್ತು ತಮಿಳುನಾಡು ಹಾಗೂ ಕೇರಳ ರಾಜ್ಯದ ಇತರ ಸ್ಥಳಗಳಿಗೆ ಎಲ್ಲಾ ಪ್ರೀಮಿಯರ್ ವಿಶೇಷ ಬಸ್‌ಗಳು ಕಾರ್ಯನಿರ್ವಹಿಸಲಿವೆ.
ಈ ವಿಶೇಷ ಬಸ್‌ಗಳಿಗೆ https://www.ksrtc.in ಅಥವಾ KSRTC Mobile App ಹಾಗೂ ಬಸ್ ನಿಲ್ದಾಣಗಳಲ್ಲಿ ಮುಂಗಡವಾಗಿ ಕಾಯ್ದಿರಿಸುವ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
KSRTC ಯ ವಿಶೇಷ ಮತ್ತು ನಿಗದಿತ ಬಸ್‌ಗಳಿಗೆ ಟಿಕೆಟ್‌ಗಳ ಮುಂಗಡ ಕಾಯ್ದಿರಿಸುವಿಕೆಯನ್ನು ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿನ ಕೌಂಟರ್‌ಗಳ ಮೂಲಕ ಬುಕ್ ಮಾಡಬಹುದು.
ಒಂದೇ ಟಿಕೆಟ್‌ನಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರ ಟಿಕೆಟ್‌ಗಳನ್ನು ಬುಕ್ ಮಾಡಿದರೆ ಪ್ರಯಾಣ ದರದಲ್ಲಿ ಶೇಕಡಾ 5 ರಷ್ಟು ರಿಯಾಯಿತಿ ನೀಡಲಾಗುವುದು ಮತ್ತು ಹಿಂತಿರುಗುವ ಪ್ರಯಾಣದ ಟಿಕೆಟ್‌ಗಳನ್ನು ಏಕಕಾಲದಲ್ಲಿ ಕಾಯ್ದಿರಿಸಿದರೆ ಹಿಂದಿರುಗುವ ಪ್ರಯಾಣದ ಟಿಕೆಟ್‌ನಲ್ಲಿ ಶೇಕಡಾ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್ಆರ್ ಟಿಸಿ ತಿಳಿಸಿದೆ.
Advertisement