
ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದಲ್ಲಿ ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವ ಮೂಲಕ ಗ್ರಾಮಸ್ಥರು ಹಿಂದೂಜ-ಮುಸ್ಲಿಂ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.
ಕಳೆದ ಮೂರು ವರ್ಷಗಳಿಂದ ಮಸಿದಿಯ ಆವರಣದಲ್ಲಿ ಹಿಂದೂ ಮುಸ್ಲಿಂ ಸಮುದಾಯದವರಿಂದ ಗಣೇಶ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಐದು ದಿನಗಳ ಕಾಲ ಗಣೇಶ ಪ್ರತಿಷ್ಠಾಪಿಸಿ ಪೂಜಾ ಕೈಂಕರ್ಯಗಳನ್ನ ನಡೆಸಲಾಗುತ್ತದೆ, ನಾಲ್ಕನೇ ದಿನ ಅನ್ನಸಂತರ್ಪಣೆ ಸೇರಿ ವಿವಿಧ ಕಾರ್ಯಕ್ರಮಗಳೂ ಸಹ ಆಯೋಜನೆ ಮಾಡಲಾಗುತ್ತದೆ, ಹಬ್ಬದ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಗ್ರಾಮಗಳಿಂದಲೂ ಹಿಂದು-ಮುಸ್ಲಿಮರು ಹನುಮಸಾಗರ ಗ್ರಾಮಕ್ಕೆ ಭೇಟಿ ನೀಡುತ್ತಾರೆ.
ಗಣೇಶ ಹಬ್ಬವಷ್ಟೇ ಅಲ್ಲ, ಇಡೀ ಗ್ರಾಮವು ವರ್ಷವಿಡೀ ಎರಡೂ ಧರ್ಮಗಳ ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುತ್ತಾರೆ. ಯುವಕರಿಗೆ ಗ್ರಾಮದ ಹಿರಿಯರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಮಾರ್ಗದರ್ಶನ ನೀಡುತ್ತಾರೆ. ಅಕ್ಕಪಕ್ಕದ ಗ್ರಾಮಗಳು, ಗದಗ ಮತ್ತು ವಿಜಯನಗರ ಜಿಲ್ಲೆಗಳ ಜನರು ಕೂಡ ಇಲ್ಲಿಗೆ ಬಂದು ಪೂಜೆ ಸಲ್ಲಿಸುತ್ತಾರೆ.
ಈ ಬಾರಿಯೂ ಸೇರಿ ಮಸೀದಿ ಆವರಣದಲ್ಲಿ 4 ವರ್ಷದ ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದೆ ಎಂದು ಗ್ರಾಮಸ್ಥರೊಬ್ಬರು ಹೇಳಿದ್ದಾರೆ.
ಗಣೇಶನ ದರ್ಶನಕ್ಕೆ ವಿಜಯನಗರ, ಗದಗ ಜಿಲ್ಲೆಗಳಿಂದ ಜನರು ಆಗಮಿಸುತ್ತಿದ್ದಾರೆ. ಮಸೀದಿ ಆವರಣದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ನಾವು ನಮ್ಮ ಸಮಾಜಕ್ಕೆ ಮಹತ್ವದ ಸಂದೇಶವನ್ನು ರವಾನಿಸುತ್ತಿದ್ದೇವೆ. ಜಾತಿ, ಧರ್ಮದ ಹೆಸರಿನಲ್ಲಿ ಜನ ಜಗಳವಾಡುತ್ತಾರೆ. ನಾವೆಲ್ಲರೂ ಒಗ್ಗಟ್ಟಾಗಿ ಹಬ್ಬ ಹರಿದಿನಗಳನ್ನು ಆಚರಿಸಿದರೆ ಅದು ಇತರರಿಗೆ ಮಾದರಿಯಾಗುತ್ತದೆ ಎಂದು ತಿಳಿಸಿದ್ದಾರೆ.
Advertisement