ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಸೋಮವಾರ ನಸುಕಿನ ಜಾವ ತೀವ್ರ ಹೃದಯಾಘಾತದಿಂದನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.
ವಿಜಯ ಕರ್ನಾಟಕ ಪತ್ರಿಕೆಯಲ್ಲಿ 1998 ರಿಂದ 2015 ರವರೆಗೆ ಸುದ್ದಿ ಸಂಪಾದಕರಾಗಿದ್ದ ವಸಂತ್ ನಾಡಿಗೇರ್ ಇನ್ನೂ ಹಲವು ಮಾಧ್ಯಮಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ.
ಕಳೆದ ಮೂರೂವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದ ವಸಂತ್ ನಾಡಿಗೇರ ಅವರು ಪನ್ ಹೆಡ್ಡಿಂಗ್, ಸುದ್ದಿಗಳಿಗೆ ಆಕರ್ಷಕ ತಲೆಬರಹ ನೀಡುವುದರಲ್ಲಿ ಜನಪ್ರಿಯರಾಗಿದ್ದರು. ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿ ನಂತರ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದರು.
ವಸಂತ ನಾಡಿಗೇರ ಅವರು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನವರು. ಇಲ್ಲಿಯೇ ಪ್ರಾಥಮಿಕ, ಪ್ರೌಢ ಶಿಕ್ಷಣ ಪಡೆದು ಧಾರವಾಡದಲ್ಲಿ ಬಿಎಸ್ಸಿ, ಎಂಎಸ್ಸಿ ಪದವಿ ಪಡೆದರು. ಎಂಬತ್ತರ ದಶಕದಲ್ಲಿ ಸಂಯುಕ್ತ ಕರ್ನಾಟಕದಿಂದ ವೃತ್ತಿ ಜೀವನ ಆರಂಭಿಸಿದ ಅವರು ಕನ್ನಡಪ್ರಭ, ವಿಜಯಕರ್ನಾಟಕ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಖಾದ್ರಿ ಶಾಮಣ್ಣ ಪ್ರಶಸ್ತಿ ಲಭಿಸಿದೆ.
ವಸಂತ ನಾಡಿಗೇರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು, ನಾಡಿನ ಹಿರಿಯ ಪತ್ರಕರ್ತರು, ಸಾಹಿತಿಗಳು ಕಂಬನಿ ಮಿಡಿದಿದ್ದಾರೆ.
Advertisement