ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಮತ್ತೆ ಮುಂದೂಡಿದೆ.
ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 12ರಂದು ನಿಗದಿ ಮಾಡಲಾಗಿದ್ದು, ಅಲ್ಲಿಯವರೆಗೂ ಸಿದ್ದರಾಮಯ್ಯಗೆ ಮತ್ತೆ ರಿಲೀಫ್ ಸಿಕ್ಕಂತಾಗಿದೆ.
ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸುತ್ತಿದ್ದು, ಇಂದು ಸಹ ಸುಧೀರ್ಘ ವಿಚಾರಣೆ ನಡೆಯಿತು.
ಮುಖ್ಯಮಂತ್ರಿಗಳ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ವೇಳೆ ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, : 17 ಎ ಅಡಿ ಪ್ರಾಸಿಕ್ಯೂಷನ್ ಗೆ ಪೊಲೀಸರು ಅನುಮತಿ ಕೇಳಬಹುದು. ಅದಕ್ಕೂ ಮೊದಲು ತನಿಖಾಧಿಕಾರಿ ಪ್ರಾಥಮಿಕ ತನಿಖೆ ನಡೆಸಬೇಕು. ಪ್ರಾಥಮಿಕ ತನಿಖೆಯ ವಿವರವನ್ನು ಸಕ್ಷಮ ಪ್ರಾಧಿಕಾರಕ್ಕೆ ನೀಡಬೇಕು ಎಂದು ಹೇಳಿ ಲಲಿತಾ ಕುಮಾರಿ ಪ್ರಕರಣವನ್ನು ಉಲ್ಲೇಖಿಸಿದರು.
ಯಾವ ಕೇಸ್ ನಲ್ಲಿ ಪ್ರಾಥಮಿಕ ತನಿಖೆ ಬೇಕೆಂಬುದನ್ನು ಸುಪ್ರೀಂಕೋರ್ಟ್ ಹೇಳಿದೆ. ಇದು 22 ವರ್ಷಕ್ಕಿಂತ ಹಳೆಯ ಕೇಸ್ ಆಗಿರುವುದರಿಂದ ಪ್ರಾಥಮಿಕ ತನಿಖೆ ಅಗತ್ಯ ಇದೆ. 17 ಎ ಅಡಿಯಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ರೂಪಿಸಿದೆ ಎಂದು ಶಶಿಕಿರಣ್ ಶೆಟ್ಟಿ ತಿಳಿಸಿದರು.
ರಾಜ್ಯಪಾಲರು ತನಿಖಾಧಿಕಾರಿಯಿಂದ ವರದಿ ಪಡೆಯಬೇಕಿತ್ತು. ಸರ್ಕಾರಕ್ಕೆ ಶೋಕಾಸ್ ನೋಟಿಸ್ ನೀಡುವ ಬದಲು ವರದಿ ಪಡೆಯಬೇಕಿತ್ತು. ವರದಿಯ ಬಲವಿಲ್ಲದೇ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರದ 17ಎ ಮಾರ್ಗಸೂಚಿ ಆಧರಿಸಿ ಅಡ್ವೊಕೆಟ್ ಜನರಲ್ ವಾದ ಮಂಡಿಸಿದರು.
ನಂತರ ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ತಾವು ಸೆಪ್ಟೆಂಬರ್ 12ರಂದು ವಾದಿಸುವುದಾಗಿ ಕೋರ್ಟ್ಗೆ ಮನವಿ ಮಾಡಿದರು. ಹೀಗಾಗಿ ಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಿದೆ.
ಪ್ರಕರಣದಲ್ಲಿ ಸಿಎಂ ವಿರುದ್ಧದ ದೂರುಗಳನ್ನು ಆಲಿಸಲು ಉದ್ದೇಶಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಯನ್ನು ಸಹ ಮುಂದಿನ ವಿಚಾರಣೆಯ ದಿನಾಂಕದವರೆಗೆ ಮುಂದೂಡುವಂತೆ ಆಗಸ್ಟ್ 19 ರ ಮಧ್ಯಂತರ ಆದೇಶವನ್ನು ನ್ಯಾಯಾಲಯವು ವಿಸ್ತರಿಸಿದೆ.
Advertisement