ಚಿಕ್ಕಮಗಳೂರು: ಕರ್ತವ್ಯ ನಿರತ ವೈದ್ಯರ ಮೇಲೆ ಮಹಿಳೆಯೊಬ್ಬರು ಚಪ್ಪಲಿ ಎಸೆದು, ಎಳೆದಾಡಿರುವ ಘಟನೆ ಚಿಕ್ಕಮಗಳೂರಿನ ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕೂಡಲೇ ಜಿಲ್ಲಾಸ್ಪತ್ರೆ ವೈದರು ಮತ್ತು ಸಿಬ್ಬಂದಿ ಹೊರ ರೋಗಿ ವಿಭಾಗ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
ಗಲಾಟೆಯೊಂದರಲ್ಲಿ ಗಾಯವಾಗಿ ಆಸ್ಪತ್ರೆಗೆ ಬಂದಿದ್ದ ಇರ್ಷಾದ್ ಎಂಬ ಮಹಿಳೆ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದಾಗ ತುರ್ತು ಚಿಕಿತ್ಸಾ ವಿಭಾಗದಲ್ಲಿ ತಪಾಸಣೆ ನಡೆಸುತ್ತಿದ್ದ ಮೂಳೆ ತಜ್ಞ ವೆಂಕಟೇಶ್ ಎಲ್ಲರೂ ಒಟ್ಟಿಗೇ ಒಳಗೆ ಬಂದಿದ್ದು, ಹೊರ ಹೋಗುವಂತೆ ಹೇಳಿದಾಗ ರೊಚ್ಚಿಗೆದ್ದ ಗಾಯಾಳು ಸಂಬಂಧಿ ತಸ್ಲಿಮಾ ವೈದ್ಯರ ಕೊರಳ ಪಟ್ಟಿ ಹಿಡಿದು ಎಳೆದಾಡಿದ್ದಾರೆ.
ಅಲ್ಲದೇ ಚಪ್ಪಲಿ ಬಿಚ್ಚಿ ಎಸೆದಿದ್ದಾರೆ. ಕೆಲವರು ಈ ಘಟನೆಯನ್ನು ತಮ್ಮ ಮೊಬೈಲ್ ಫೋನ್ ನಲ್ಲಿ ವಿಡಿಯೋ ಮಾಡಿಕೊಂಡದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ವಿಧಾನಪರಿಷತ್ ಸದಸ್ಯ ಸಿ. ಟಿ.ರವಿ, ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ. ವೆಂಕಟೇಶ್ ಅವರ ಮೇಲಿನ ಹಲ್ಲೆ ಅಮಾನವೀಯ ಘಟನೆ. ಇಂತಹ ನೀಚ ಕೃತ್ಯ ಎಸಗಿದವರನ್ನು ಕೂಡಲೇ ಬಂಧಿಸಿ ವೈದ್ಯಕೀಯ ಸಿಬ್ಬಂದಿಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಡಿಜಿಪಿ ಅಲೋಕ್ ಮೋಹನ್ ಅವರನ್ನು ಒತ್ತಾಯಿಸಿದ್ದಾರೆ.
Advertisement