ಮಂಡ್ಯ: ಗಣಪತಿ ವಿಸರ್ಜನಾ ಮೆರವಣಿಗೆ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಬಳಿಕ ಮಂಡ್ಯದ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಪಟ್ಟಣದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು ನಾಗಮಂಗಲದಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಡಾ. ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು, ನಾಗಮಂಗಲದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವುದರಿಂದ ಸೆಪ್ಟೆಂಬರ್ 14ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದರು. ಇನ್ನು ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಅವರು ಭೇಟಿ ನೀಡಿ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು.
ದುಷ್ಕರ್ಮಿಗಳು ಗಣೇಶನ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದಲ್ಲದೆ ಮಾರಕಾಸ್ತ್ರಗಳನ್ನು ಇಡಿದು ಓಡಾದಿದ್ದರು. ನಂತರ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು ಹಲವು ಅಂಗಡಿಗಳು, ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಬೆಂಕಿ ಹಚ್ಚಿದ್ದರು. ಇದರಿಂದ ಕೆರಳಿದ ಮತ್ತೊಂದು ಸಮುದಾಯದವರು ಸಹ ಬೆಂಕಿ ಹಚ್ಚಿದ್ದಾರೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ತೊಡಗಿದ್ದಾರೆ. ಬೆಂಕಿ ಹಚ್ಚಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಎರಡು ಸಮುದಾಯದ 28 ಮಂದಿಯನ್ನು ಬಂಧಿಸಿ ಠಾಣೆಗೆ ಕರೆತಂದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಆದ ಗಲಾಟೆ ಕುರಿತು ಮಾತನಾಡಿದ ಸಚಿವ ಚಲುವರಾಯಸ್ವಾಮಿ ಅವರು, ಸದ್ಯ ಪರಿಸ್ಥಿತಿ ಈ ಪೂರ್ಣ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಂದಿದೆ. 144 ಸೆಕ್ಷನ್ ಕೂಡ ಜಾರಿಯಲ್ಲಿದೆ. ಯಾವುದೇ ಆಸ್ತಿ ನಷ್ಟ, ಪ್ರಾಣಹಾನಿಯಾಗದಂತೆ ನೋಡಿಕೊಳ್ಳಿ. ಪರಿಸ್ಥಿತಿ ನಿಯಂತ್ರಣಕ್ಕೆ ಸೂಚನೆ ಕೊಟ್ಟಿದ್ದೇವೆ ಎಂದು ತಿಳಿಸಿದರು.
ಗಣೇಶ ವಿಸರ್ಜನೆ ಗಲಾಟೆ ಕುರಿತು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ
ಮಂಡ್ಯದಲ್ಲಿ ನಾಗಮಂಗಲದ ಬದರಿಕೊಪ್ಪಲಿನಲ್ಲಿನ ಗಣೇಶ ವಿಸರ್ಜನೆ ಗಲಾಟೆ ಕುರಿತು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಮಂಡ್ಯ ಗಲಾಟೆ ಪ್ರಕರಣ ಸಂಬಂಧ ಎಸ್‌ಪಿ ಜೊತೆ ಮಾತನಾಡಿದ್ದೇನೆ. ಸಾಯಂಕಾಲ ನಡೆದ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಆಗಿದೆ ಎಂದರು. ಕಠಿಣ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಇನ್ನು ಸಿದ್ದರಾಮಯ್ಯ ಸರ್ಕಾರ ಯಾವುದೋ ಒಂದು ಗುಂಪು ಓಲೈಸಿಕೊಂಡು ಹೋಗುವ ಕೆಲಸ ಮಾಡುತ್ತಿದೆ. ಇದರಿಂದಲೇ ಅವರಲ್ಲಿ ಒಂದು ರೀತಿಯ ಉದ್ಧಟತನ ಪ್ರಾರಂಭವಾಗಿದೆ. ಇಂತಹ ಘಟನೆಗಳ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಒಂದು ಗುಂಪನ್ನು ಓಲೈಸಿದರೆ, ನಾವು ಏನು ಮಾಡಿದರೂ ಸರ್ಕಾರ ನಮ್ಮ ರಕ್ಷಣೆಗಿದೆ ಎಂಬ ಭಾವನೆ ಬರುತ್ತದೆ. ಹೀಗಾಗಿ ಇಂತಹ ಘಟನೆಗಳಿಗೆ ಅವಕಾಶ ಕೊಡಬಾರದು ಎಂದು ಒತ್ತಾಯಿಸಿದರು.
Advertisement