ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದಿರುವುದು ಆಕಸ್ಮಿಕವಾಗಿ ಕಲ್ಲು ತೂರಾಟ, ಇದೊಂದು ಸಣ್ಣ ಘಟನೆಯಾಗಿದ್ದು ಕೋಮು ಗಲಭೆ ಎಂದು ಹೇಳುವುದು ತಪ್ಪಾಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿ ಬುಧವಾರ ರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಕೋಮು ಗಲಭೆ ವಿಚಾರವಾಗಿ ಪ್ರತಿಕ್ರಿಯಿಸಿದ ಪರಮೇಶ್ವರ್ ಇದೊಂದು ಆಕಸ್ಮಿಕ ಘಟನೆ, ಕೋಮು ಗಲಭೆಯಾಗಿಲ್ಲ ಎಂದಿದ್ದಾರೆ. ನಿನ್ನೆ ಈ ಘಟನೆ ನಡೆಯಬಾರದಿತ್ತು. ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಗಿ ಅಂತ್ಯವಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕರು, ಐಜಿಪಿ, ಕೆಎಸ್‌ಆರ್‌ಪಿ ತುಕಡಿ ಸ್ಥಳದಲ್ಲಿದೆ. ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರನ್ನು ಸ್ಥಳಕ್ಕೆ ಕಳುಹಿಸಿಕೊಟ್ಟಿದ್ದೇನೆ. ಈ ಘಟನೆಯನ್ನು ಕೋಮು ಗಲಭೆ ಅಂತ ಹೇಳಲಾಗದು. ಇದನ್ನು ಹೆಚ್ಚು ಬೆಳೆಯಲು ಪೊಲೀಸರು ಬಿಟ್ಟಿಲ್ಲ. ಹೆಚ್ಚು ಪ್ರಚಾರ ನೀಡುವುದೂ ಬೇಡ ಎಂದು ಮನವಿ ಮಾಡಿದರು. ನಾಗಮಂಗಲ ಘಟನೆ ಸಂಬಂಧ ಸುಮಾರು 52 ಜನರನ್ನು ಬಂಧಿಸಲಾಗಿದೆ. ಕಲ್ಲು ತೂರಾಟ ವೇಳೆ ಒಬ್ಬ ಎಎಸ್ಐಗೂ ಗಾಯವಾಗಿದೆ. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ವಿನಂತಿಸಿದ್ದಾರೆ.
ಘಟನೆಗೆ ಅತಿಯಾದ ಓಲೈಕೆಯೇ ಕಾರಣ ಎಂದಿರುವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಅವರು ಈ ಹಿಂದೆ ಯಾವ ರೀತಿ ಓಲೈಕೆ ಮಾಡುತ್ತಿದ್ದರೋ ಗೊತ್ತಿಲ್ಲ ಎಂದು ತಿರುಗೇಟು ನೀಡಿದರು. ಇದರಲ್ಲಿ ರಾಜಕೀಯ ಮಾಡುವುದು ಬೇಡ. ಪೊಲೀಸರಿಗೆ ಬಿಟ್ಟರೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಕಾನೂನು ಸಲಹೆ ಕೊಡುವುದಾದರೆ ಸ್ವಾಗತಿಸುತ್ತೇನೆ. ಘಟನೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದರ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದರು.
ಕಳೆದ ವರ್ಷವೂ ಇದೇ ರೀತಿಯ ಘಟನೆಗಳು ನಡೆದಿದ್ದರೂ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ್ , ಸ್ಥಳದಲ್ಲಿ ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಸಹಾಯ ಮಾಡಿತು. ಇಲ್ಲದಿದ್ದರೆ, ದೊಡ್ಡ ಹಿಂಸಾಚಾರ ನಡೆಯುವ ಸಾಧ್ಯತೆಯಿತ್ತು. ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿರುವುದನ್ನು ಗಮನಿಸಿದ ಸಚಿವರು, ಸಹಾಯಕ ಸಬ್‌ಇನ್‌ಸ್ಪೆಕ್ಟರ್ ಗಾಯಗೊಂಡಿದ್ದು, ಎಲ್ಲರನ್ನು ಪರಿಗಣಿಸಿ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಹೇಳಿದರು. ಈ ಘಟನೆಯ ಹಿಂದೆ ಯಾವುದೇ ರಾಜಕೀಯ ಪ್ರಚೋದನೆ ಇಲ್ಲ ಎಂದು ಮೇಲ್ನೋಟಕ್ಕೆ ತೋರುತ್ತಿದೆ ಎಂದು ಅವರು ಹೇಳಿದರು. "ತನಿಖಾ ವರದಿಯಿಂದ ಏನಾಗುತ್ತದೆ ಎಂಬುದನ್ನು ನೋಡೋಣ.
Advertisement