'ಕನ್ನಡದಲ್ಲಿ ಕಡ್ಡಾಯ ವೈದ್ಯಕೀಯ ಪ್ರಿಸ್ಕ್ರಿಪ್ಷನ್': ಅರ್ಥೈಸಿಕೊಳ್ಳುವುದರಲ್ಲಿ ಸ್ವಲ್ಪ ಎಡವಿದರೂ ರೋಗಿಗಳಿಗೆ ಅಪಾಯ ಎದುರಾಗಬಹುದು; ಸರ್ಕಾರ ಕಳವಳ

ಸರಕಾರಿ ವೈದ್ಯರೆಲ್ಲರೂ ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯಬೇಕೆಂದು ಸರಕಾರದ ಆದೇಶ ಜಾರಿ ಮಾಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು ಆಗ್ರಹಿಸಿದ್ದರು.
ವೈದ್ಯರು, ಸಂಗ್ರಹ ಚಿತ್ರ
ವೈದ್ಯರು, ಸಂಗ್ರಹ ಚಿತ್ರ
Updated on

ಬೆಂಗಳೂರು: ಸರ್ಕಾರಿ ವೈದ್ಯರೆಲ್ಲರೂ ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯಬೇಕೆಂಬ ಆದೇಶ ಜಾರಿ ಆಗ್ರಹಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಗುರುವಾರ ಕಳವಳ ವ್ಯಕ್ತಪಡಿಸಿದ್ದಾರೆ.

ಸರಕಾರಿ ವೈದ್ಯರೆಲ್ಲರೂ ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯಬೇಕೆಂದು ಸರಕಾರದ ಆದೇಶ ಜಾರಿ ಮಾಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು ಆಗ್ರಹಿಸಿದ್ದರು. ಈ ಸಂಬಂಧ ದಿನೇಶ್ ಗುಂಡೂರಾವ್ ಅವರಿಗೆ ಪತ್ರ ಬರೆದಿದ್ದರು.

ಈ ಪತ್ರಕ್ಕೆ ಸ್ಪಂದನೆ ನೀಡಿರುವ ದಿನೇಶ್ ಗುಂಡೂರಾವ್ ಅವರು, ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯಬೇಕೆಂದು ತಾವು ಮಾಡಿರುವ ಸಲಹೆ ಅತ್ಯಂತ ಮಹತ್ವಪೂರ್ಣ ವಿಷಯ ಎನಿಸಿತು. ನೂರಾರು ವೈದ್ಯರು ತಮ್ಮ ಮಾತುಗಳಿಂದ ಪ್ರೇರಿತರಾಗಿ ಕನ್ನಡದಲ್ಲಿ ಬರೆದ ಔಷಧಿ ಚೀಟಿಗಳನ್ನು ತಮ್ಮಲ್ಲಿ ಹಂಚಿಕೊಂಡಿದ್ದಾರೆ ಎನ್ನುವುದು ಸಹ ನಿಜಕ್ಕೂ ಸಂತಸದ ಸಂಗತಿ. ಇಂಗ್ಲೀಷ್ ಭಾಷೆ ಇತರೆ ಭಾಷೆಗಳನ್ನು ಆಪೋಶನ ತೆಗೆದುಕೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ ದೈನಂದಿನ ಜೀವನದಲ್ಲಿ ಕನ್ನಡ ಭಾಷೆ ಉಳಿಯಲು, ಬೆಳೆಯಲು ಇಂತಹ ಕ್ರಮಗಳು ಪೂರಕ ಎನ್ನುವುದು ಸರ್ವವೇದ್ಯ ಸಂಗತಿಯಾಗಿದೆ.

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯುವುದನ್ನು ಕಡ್ಡಾಯಗೊಳಿಸುವ ವಿಚಾರದಲ್ಲಿ ಸಾಕಷ್ಟು ತಾಂತ್ರಿಕ ಸಂಗತಿಗಳು ಮಿಳಿತವಾಗಿದೆ. ವೈದ್ಯರು, ರೋಗಿಗಳು, ಶುಶೂಷಕರು, ಔಷಧಿ ವರ್ತಕರು ಮುಂತಾದ ಹತ್ತು ಹಲವು ಪ್ರಭಾ ಕೇಂದ್ರಗಳಿರುವ ಈ ವ್ಯವಸ್ಥೆಯ ಒಂದು ಕೊಂಡಿ ಸರಿಯಾಗಿ ಕನ್ನಡವನ್ನು ಅರ್ಥೈಸಿಕೊಳ್ಳುವುದರಲ್ಲಿ ಎಡವಿದರೂ ರೋಗಿಗಳ ಜೀವನ್ಮರಣದ ಪ್ರಶ್ನೆಯಾಗುವ ಸಾಧ್ಯತೆಯೂ ಇದೆ.

ವೈದ್ಯರು, ಸಂಗ್ರಹ ಚಿತ್ರ
ಸರ್ಕಾರಿ ವೈದ್ಯರು ಕನ್ನಡದಲ್ಲಿ ಪ್ರಿಸ್ಕ್ರಿಪ್ಷನ್ ಬರೆಯುವಂತೆ ಶೀಘ್ರ ಆದೇಶ: ಕೆಡಿಎ ಅಧ್ಯಕ್ಷ

ಜನರ ಆರೋಗ್ಯವನ್ನು ಕಾಯುವ ವೈದ್ಯಕೀಯ ವಿಜ್ಞಾನ ಕ್ಷೇತ್ರ ಅತ್ಯಂತ ವಿಶಾಲ ಮತ್ತು ಸಂಕೀರ್ಣವಾಗಿದ್ದು, ಪ್ರಮುಖ ಬದಲಾವಣೆಗಳ ಮುನ್ನ ಎಲ್ಲ ಭಾಗಿದಾರರುಗಳ ಜೊತೆಗೆ ಪೂರ್ವಸಂವಾದ ಅಗತ್ಯ ಎನ್ನುವುದು ನನ್ನ ಭಾವನೆ. ಇದು ಕೇವಲ ಒಂದು ಆದೇಶದ ಮೂಲಕ ಜಾರಿಗೆ ಬರುವ ವಿಚಾರವಲ್ಲ ಎಂದು ಹೇಳಿದ್ದಾರೆ.

ಕನ್ನಡದಲ್ಲಿ ವೈದ್ಯಕೀಯ ವ್ಯವಹಾರದ ಅನುಷ್ಠಾನ ಪೂರ್ವದಲ್ಲಿ ಸಾಧಕ ಬಾಧಕಗಳ ಬಗ್ಗೆ ವಿಸ್ತೃತ ಚರ್ಚೆ ಅತ್ಯಗತ್ಯ ಎನ್ನುವುದನ್ನು ತಾವೂ ಒಪ್ಪಿಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ. ಕನ್ನಡದ ಅಸ್ಮಿತೆಯನ್ನು ಸಾರುವುದರಲ್ಲಿ ನಾವು ಹಿಂದಡಿ ಇಡುವುದು ಸಾಧ್ಯವೇ ಇಲ್ಲದಿದ್ದರೂ ವೈದ್ಯಕೀಯ ಕ್ಷೇತ್ರದಲ್ಲಿ ಇದು ಎಷ್ಟರ ಮಟ್ಟಿಗೆ ಸಾಧ್ಯ ಎಂಬುದನ್ನು ಎಲ್ಲರನ್ನೂ ಒಳಗೊಳ್ಳುವ ರೀತಿಯಲ್ಲಿ ಪರಾಮರ್ಶಿಸಲೇಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಾಧಿಕಾರದ ಔಚಿತ್ಯಪೂರ್ಣ ಸಲಹೆಯನ್ನು ಮುಖ್ಯಮಂತ್ರಿಗಳ ಅವಗಾಹನೆಗೆ ತಂದು ಆಸಕ್ತರ ಸಹಮತಿಯೊಂದಿಗೆ ಜಾರಿಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಮಗೆ ತಿಳಿಯಬಯಸುತ್ತೇನೆ. ನಮ್ಮ ಸರ್ಕಾರ ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗಾಗಿ ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲು ಸದಾ ಸನ್ನದ್ಧವಾಗಿದ್ದು, ಈ ಸಂದರ್ಭದಲ್ಲೂ ಧನಾತ್ಮಕ ನಿಲುವನ್ನೇ ನಿರೀಕ್ಷಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com